ಬೆಂಗಳೂರು:ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಸಲು ಆಲೋಚಿಸಲಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಇನ್ನಷ್ಟೇ ಸಮಯ ನಿಗದಿ ಮಾಡಬೇಕಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ರೇಸ್ ಕೋರ್ಸ್ ರಸ್ತೆ ಬಳಿ ಉದ್ದೇಶಿತ ಕಾಂಗ್ರೆಸ್ ಭವನ ನಿರ್ಮಾಣ ಜಾಗಕ್ಕೆ ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಪಕ್ಷದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಅಧ್ಯಕ್ಷರು, ಶಾಸಕರು ಹಾಗೂ ಮಾಜಿ ಶಾಸಕರು, ಪಕ್ಷದ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಸಂಸದರು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಿಗೆ ಆಹ್ವಾನ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ. ಕಾರ್ಯಕರ್ತರು ಕ್ಷಮಿಸಬೇಕು. ಅಲ್ಲಿ ಜಾಗದ ಕೊರತೆ ಇರುವುದರಿಂದ ಆಹ್ವಾನಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ರಾಹುಲ್ ಗಾಂಧಿ ಅವರಿಗೆ ಇನ್ನಷ್ಟೇ ನೀಡಲಾಗುವುದು. ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಕಚೇರಿ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ಎಲ್ಲಾ ನಾಯಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ನೀಡಲು ಆಗದ ಕಾರಣ, ಇಲ್ಲೇ ಎಲ್ ಇ ಡಿ ಪರದೆಗಳಲ್ಲಿ ಆ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ನಮಗಾಗಿ ಹೋರಾಟ ಮಾಡಿ, ಶ್ರಮಿಸಿದ ನಾಯಕರಿಗೆ ನಾವು ಇಷ್ಟಾದರೂ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.
ನೂರು ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆಯನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಲೋಕಭವನದಲ್ಲಿ ಪ್ರಮಾಣ ವಚನ
ಪ್ರಮಾಣ ವಚನ ಸ್ವೀಕಾರದ ವೇಳೆ ಬೆಂಗಳೂರಿನ ನಾಗರಿಕರಿಗೆ ತೊಂದರೆಯಾಗಬಾರದು, ಈ ಕಾರ್ಯಕ್ರಮಕ್ಕೆ ಹೊರಗಡೆಯಿಂದ ಹೆಚ್ಚಿನ ವಾಹನ ಆಗಮಿಸಿ ಸಂಚಾರ ದಟ್ಟಣೆ ಆಗಬಾರದು ಎಂಬ ಕಾರಣಕ್ಕೆ ವಿಧಾನಸೌಧದ ಮೆಟ್ಟಿಲುಗಳ ಬದಲು ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಮಾಡಲಾಗುವುದು. ಈ ಕಾರ್ಯಕ್ರಮ ಸರಳವಾಗಿ ನಡೆಯುತ್ತಿರುವುದರಿಂದ ಹೆಚ್ಚಿನ ಜನ ಸೇರಲು ಆಗುವುದಿಲ್ಲ. ಹೀಗಾಗಿ ನಮ್ಮ ಕಾರ್ಯಕರ್ತರು ಕ್ಷಮಿಸಬೇಕು ಎಂದರು.
ಸಚಿವರ ಪ್ರಮಾಣ ವಚನ; ಹೈಕಮಾಂಡ್ ತೀರ್ಮಾನ
ನಿಮ್ಮ ಜೊತೆ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡುವರೇ ಎಂದು ಕೇಳಿದಾಗ, ನನಗೆ ಆ ಬಗ್ಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
