ಬೆಂಗಳೂರು: ನಾಳೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸಮಾರಂಭ ಲೋಕಭವನದಲ್ಲಿ ನಿಗದಿಯಾಗಿರುವುರಿಂದ ಸುತ್ತಮುತ್ತಲ ಪ್ರದೇಶದಲ್ಲಿ ಜನಸಂದಣಿ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ನಾಳೆ ಅಪರಾಹ್ನದಿಂದ ರಜೆ ಘೋಷಿಸಲಾಗಿದೆ.
ಇದೇ ವೇಳೆ, ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರು ಪ್ರವೇಶಿಸಲು ಅವಕಾಶವಿರುವುದಿಲ್ಲ. ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕೆಲ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ.
ಕಬ್ಬನ್ ರಸ್ತೆಯ ಬಿಆರ್‌ವಿ ಜಂಕ್ಷನ್‌ನಿಂದ ಸಿಟಿಒ ಜಂಕ್ಷನ್‌ವರೆಗೆ ಹಾಗೂ ಸಿಟಿಒ ವೃತ್ತದಿಂದ ಲೋಕಭವನದವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ, ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿ ಪ್ರದೇಶದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
