ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 25540 ಮಂಜೂರಾದ ಹುದ್ದೆಗಳಿದ್ದು, ಈ ಪೈಕಿ ಖಾಲಿ ಇರುವ 8770 ಹುದ್ದೆ ಪೈಕಿ 4 ಸಾವಿರ ಹುದ್ದೆಯ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಪರಿಚಯಾತ್ಮಕ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ ವರ್ಗದ 268, ಬಿ ವರ್ಗದ 1079, ಸಿ ವರ್ಗದ 5294, ಡಿ ವರ್ಗದ 2129 ಹುದ್ದೆಗಳು ಖಾಲಿ ಇದ್ದು, ಈ ಪೈಕಿ ಎಲ್ಲ ವರ್ಗದ ಹುದ್ದೆಗಳ ಪೈಕಿ 4 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಎಲ್ಲ ಹುದ್ದೆಗಳನ್ನು ಪಾರದರ್ಶಕವಾಗಿ ಭರ್ತಿ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕದ ಎಲ್ಲ ಹುದ್ದೆಗಳ ಭರ್ತಿಗೆ ಸೂಚನೆ:
ಕಲ್ಯಾಣ ಕರ್ನಾಟಕ ಭಾಗದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೂ ಕ್ರಮ ವಹಿಸುವಂತೆ ಸೂಚನೆ ನೀಡಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದರು.
ಈಗಾಗಲೇ ಜೂನ್ 3ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ 56 ಸಾವಿರ ಹುದ್ದೆಗಳ ನೇಮಕಾತಿಗೆ ಸಮ್ಮತಿ ಸೂಚಿಸಿದ್ದು, 1400 ಹುದ್ದೆಗಳ ಭರ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಅನುಮತಿ ನೀಡಲಾಗಿದೆ. ಈ ಹುದ್ದೆಗಳ ಭರ್ತಿಗೆ ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಸಮೀರ್ ಶುಕ್ಲ, ರಂದೀಪ್ ಡಿ, ಪಂಚಾಯತ್ ರಾಜ್ ಆಯುಕ್ತರಾದ ಡಾ ಅರುಂಧತಿ, ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ, ಕುಡಿಯುವ ನೀರು ಪೂರೈಕೆ ವಿಭಾಗದ ಆಯುಕ್ತರಾದ ಫೌಜಿಯಾ ತರುನ್ನುಂ ಮತ್ತಿತರರು ಪಾಲ್ಗೊಂಡಿದ್ದರು.
