ಸಮಗ್ರ ಸುದ್ದಿ

ಖೇತ್ ಬಚಾವೋ ಅಭಿಯಾನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಚಾಲನೆ|ಮಣ್ಣಿನ ಆರೋಗ್ಯ ಕಾಪಾಡುವುದು ಇಂದಿನ ಅಗತ್ಯವಾಗಿದೆ: ಬಸವರಾಜ ಬೊಮ್ಮಾಯಿ

Share

ಗದಗ: ರೈತರ ಕೃಷಿ ಭೂಮಿಯ ಸಂರಕ್ಷಣೆ, ಮಣ್ಣಿನ ಫಲವತ್ತತೆ ಕಾಪಾಡುವಿಕೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರ, ರಾಜ್ಯ ಸರ್ಕಾರ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ‘ಖೇತ್ ಬಚಾವೋ ಅಭಿಯಾನ’ಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ‌ ಬೊಮ್ಮಾಯಿ ಅವರು ಮಂಗಳವಾರ ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದರು, ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕೃಷಿ ಭೂಮಿಯ ಸಂರಕ್ಷಣೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡುವಿಕೆ ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ರೈತರು ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಮಣ್ಣಿನ ಪರೀಕ್ಷೆ, ನೀರಿನ ಸಮರ್ಪಕ ಬಳಕೆ ಹಾಗೂ ಸಾವಯವ ಮತ್ತು ನೈಸರ್ಗಿಕ ಕೃಷಿ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಖೇತ್ ಬಚಾವೋ ಅಭಿಯಾನದ ಮೂಲಕ ರೈತರಿಗೆ ಕೃಷಿ ಭೂಮಿಯ ಸಂರಕ್ಷಣೆ, ಮಣ್ಣಿನ ಸವಕಳಿ ತಡೆ, ಬೆಳೆ ವೈವಿಧ್ಯತೆ, ನೀರಿನ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಕೃಷಿ ಪದ್ಧತಿಗಳ ಕುರಿತು ಅರಿವು ಮೂಡಿಸಲಾಗುವುದು. ಈ ಅಭಿಯಾನವು ರೈತರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕಿದ್ದು, ರೈತ ಸಮುದಾಯವೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಇದರ ಉದ್ದೇಶಗಳನ್ನು ಸಾಕಾರಗೊಳಿಸಬೇಕು ಎಂದು ಸಂಸದರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ‌ ಎನ್ ಶ್ರೀಧರ, ಜಂಟಿ ಕೃಷಿ ನಿರ್ದೇಶಕಿ ಚೇತನಾ‌ಪಾಟೀಲ್, ಕೃಷಿ ಸಹಾಯಕ ನಿರ್ದೇಶಕ ಮಲ್ಲಯ್ಯ ಕೆ, ಜಿಲ್ಲಾ ಪಂಚಾಯತ್ ಅಧಿಕಾರಿಗಳಾದ ಎಂ.ವಿ. ಚಳಗೇರಿ, ಎಸ್.ಎಸ್. ಕಲ್ಮನಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಅಭಿಯಾನದ ಅಂಗವಾಗಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ರೈತರ ಸಭೆಗಳು ಹಾಗೂ ಕೃಷಿ ತಂತ್ರಜ್ಞಾನ ಕುರಿತ ಮಾಹಿತಿ ಶಿಬಿರಗಳನ್ನು ಆಯೋಜಿಸಿ ರೈತರಿಗೆ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.


Share

You cannot copy content of this page