ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ವಿಧಾನಸೌಧದಲ್ಲಿ ಇಂದು ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಂತೆ ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರಿಗೆ ಸೂಕ್ತ ತರಬೇತಿ, ಆರ್ಥಿಕ ನೆರವು ಮತ್ತು ಸ್ಪರ್ಧಾತ್ಮಕ ಅವಕಾಶಗಳನ್ನು ಒದಗಿಸಿದರೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಅಲ್ಲದೆ, ರಾಜ್ಯದ ಸಾಂಪ್ರದಾಯಿಕ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.
ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳ ಕುರಿತು ಸಭೆಯಲ್ಲಿ ಚರ್ಚಿಸಿದರು. ಸಾಧಕರಿಗೆ ನೀಡಬೇಕಿರುವ ಕ್ರೀಡಾ ಪ್ರಶಸ್ತಿಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು. ಅರ್ಹ ಕ್ರೀಡಾಪಟುಗಳನ್ನು ಪಾರದರ್ಶಕವಾಗಿ ಗುರುತಿಸಿ, ಪ್ರಶಸ್ತಿಗಳನ್ನು ನೀಡುವ ಮೂಲಕ ಅವರ ಸಾಧನೆಯನ್ನು ಗೌರವಿಸುವ ಕೆಲಸವಾಗಬೇಕು. ಇದು ಇತರ ಯುವ ಕ್ರೀಡಾಪಟುಗಳಿಗೂ ಪ್ರೇರಣೆಯಾಗಲಿದೆ ಎಂದು ಅವರು ಹೇಳಿದರು.
ಒಲಂಪಿಕ್, ಏಷ್ಯಾನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಜ್ಯಕ್ಕೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿನ ಹುದ್ದೆಗಳಿಗೆ ನೇಮಕ ಮಾಡುವ ಮೂಲಕ, ಕ್ರೀಡಾಪಟುಗಳಿಗೆ ಉತ್ತೇಜನ ಸರ್ಕಾರದ ಜವಾಬ್ದಾರಿ ಎಂದು ತಿಳಿಸಿದರು.
ಮುಜರಾಯಿ ಇಲಾಖೆಯ ಆಡಳಿತಾತ್ಮಕ ವಿಚಾರಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು. ರಾಜ್ಯದ ಮುಜರಾಯಿ ಇಲಸಖೆಗೆ ಒಳಪಡುವ ದೇವಸ್ಥಾನಗಳ ನಿರ್ವಹಣೆ, ಭಕ್ತರಿಗೆ ಒದಗಿಸಲಾಗುತ್ತಿರುವ ಸೌಕರ್ಯಗಳು ಹಾಗೂ ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಸುಧಾರಿಸಬೇಕು. ಖಾಲಿ ಇರುವ 235 ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪ್ರಾರಂಭಿಸಬೇಕು. ಈ ನಿಟ್ಟಿನಲ್ಲಿ ಇಲಾಖೆಯ ಎಲ್ಲಾ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಕುಮಾರ್, ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ನಿರ್ದೇಶಕ ಬಸವರಾಜೇಂದ್ರ ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
