ಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಮಾಡುವ ಪೌರ ಕಾರ್ಮಿಕರಿಗೆ ಸುರಕ್ಷಿತವಾಗಿ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬ ಬಗ್ಗೆ ವೈಜ್ಞಾನಿಕ ತರಬೇತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಜಕ್ಕೂರು ಬಳಿ ಇರುವ ಮಹಾತ್ಮಾ ಗಾಂಧೀ ಜೈವಿಕ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳನ್ನು ಪರಾಮರ್ಶೆ ನಡೆಸಿದ ಅವರು, ಘನತ್ಯಾಜ್ಯ ನಿರ್ವಹಣೆಯಲ್ಲಿನ ಉತ್ತಮ ರೂಢಿಗಳನ್ನು ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳೊಂದಿಗೆ ಹಂಚಿಕೊಳ್ಳುವಂತೆ ಮತ್ತು ಪೌರಕಾರ್ಮಿಕರಿಗೆ ಸುರಕ್ಷಿತವಾಗಿ ಹೇಗೆ ತ್ಯಾಜ್ಯ ವಿಲೇವಾರಿ ಮಾಡಬೇಕು ಎಂಬ ಬಗ್ಗೆ ತರಬೇತಿ ನೀಡುವಂತೆ ತಿಳಿಸಿದರು.
ಜೈವಿಕ ಇಂಧನ ಮುಂದಿನ ಪೀಳಿಗೆ ಇಂಧನ- ಈಶ್ವರ ಖಂಡ್ರೆ:
ಜೈವಿಕ ಇಂಧನ ಭವಿಷ್ಯದ ಇಂಧನವಾಗಿದ್ದು, ಈ ಬಗ್ಗೆ ಮುಂದಿನ ಪೀಳಿಗೆಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಈ ಸಂಸ್ಥೆಯಲ್ಲಿ ನಡೆಯುವ ತರಬೇತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ಶಾಲಾ ಮತ್ತು ಕಾಲೇಜು ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ತಿಳಿಸಿದರು.
ವಾರ್ಷಿಕವಾಗಿ 150 ಐಐಟಿ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಒಂದು ತಿಂಗಳ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಅವರು, ವಿದ್ಯಾರ್ಥಿಗಳ ಸಂಖ್ಯೆಯನ್ನು ವಾರ್ಷಿಕ 300ಕ್ಕೆ ಹೆಚ್ಚಿಸಲು ಮತ್ತು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡಲು ಮತ್ತು ಅವರಿಗೆ ಇಂಗ್ಲಿಷ್ ಮಾತನಾಡುವ (ಸ್ಪೋಕನ್ ಇಂಗ್ಲಿಷ್) ತರಬೇತಿಯನ್ನೂ ನೀಡಲು ಸೂಚಿಸಿದರು.
ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ, ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ರಂದೀಪ್, ಮಹಾತ್ಮಾ ಗಾಂಧೀ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ಗಾಯತ್ರಿ ರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.
