ಸಮಗ್ರ ಸುದ್ದಿ

ವೇಳಾಪಟ್ಟಿ ಅನ್ವಯ ಪ್ರಮುಖ ಕಾಮಗಾರಿಗಳನ್ನು ನಿರ್ವಹಿಸಿ: ಮಹೇಶ್ವರ್ ರಾವ್ | ಅಕ್ಟೋಬರ್ 15ರೊಳಗೆ ಹೋಪ್ ಫಾರ್ಮ್ ಜಂಕ್ಷನ್ ಕೆಳಸೇತುವೆ ಕಾಮಗಾರಿ ಪೂರ್ಣಗೊಳಿಸಲು‌ ಸೂಚನೆ

Share

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಪ್ರಮುಖ ಕಾಮಗಾರಿಗಳನ್ನು ನಿಗದಿತ ವೇಳಾಪಟ್ಟಿಯಂತೆ ನಿರ್ವಹಿಸಿ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳಲ್ಲಿ ಕೈಗೆತ್ತಿಕೊಂಡಿರುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಮಗಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸ್ಪಷ್ಟ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು, ಅಗತ್ಯ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ನಿಯೋಜಿಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಹೋಪ್ ಫಾರ್ಮ್ ಜಂಕ್ಷನ್ ಕೆಳಸೇತುವೆ ಕಾಮಗಾರಿ ತ್ವರಿತಗೊಳಿಸಿ:

ಹೋಪ್ ಫಾರ್ಮ್ ಜಂಕ್ಷನ್‌ನಲ್ಲಿ ಕೆಳಸೇತುವೆ ನಿರ್ಮಾಣಕ್ಕೆ ತೊಡಕಾಗಿದ್ದ ಭೂಸ್ವಾಧೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಕೇವಲ ಒಂದು ಆಸ್ತಿಯ ಸ್ವಾಧೀನ ಮಾತ್ರ ಬಾಕಿಯಿದೆ. ಈ ಸಂಬಂಧ ತ್ವರಿತವಾಗಿ ಜಾಗವನ್ನು ಪಾಲಿಕೆ ವಶಕ್ಕೆ ಪಡೆದು ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದರು.

ಜೊತೆಗೆ, ಕೆಳಸೇತುವೆ ಕಾಮಗಾರಿಯ ಪ್ರತಿ ವಾರದ ಪ್ರಗತಿ ಚಟುವಟಿಕೆಗಳ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅದರಂತೆ ಕಾರ್ಯನಿರ್ವಹಿಸಿ, ಅಕ್ಟೋಬರ್ 15ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವಂತೆ ಸೂಚನೆ ನೀಡಿದರು.

ಸರ್ವೀಸ್ ರಸ್ತೆಯಲ್ಲಿ ಡಾಂಬರೀಕರಣ ಕಾರ್ಯ ಕೈಗೊಳ್ಳಬೇಕಿದ್ದು, ರಸ್ತೆಯಲ್ಲಿರುವ ಸಂಚಾರಿ ಪೊಲೀಸ್ ಕ್ಯಾಮೆರಾ ಕಂಬವನ್ನು ಸ್ಥಳಾಂತರಿಸಬೇಕಾಗಿದೆ. ಈ ಕುರಿತು ಸಂಚಾರಿ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ಡಾಂಬರೀಕರಣ ಕಾರ್ಯ ಪೂರ್ಣಗೊಳಿಸಬೇಕು. ನಂತರ ಮತ್ತೊಂದು ಭಾಗದ ಸರ್ವೀಸ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಕೆಆರ್‌ಡಿಸಿಎಲ್ ಕಾಮಗಾರಿಗಳಿಗೆ ವೇಗ ನೀಡಿ:

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಆರ್‌ಡಿಸಿಎಲ್ ವತಿಯಿಂದ ಕೈಗೆತ್ತಿಕೊಂಡಿರುವ ಕಾಡುಗೋಡಿ ಮೇಲ್ಸೇತುವೆ, ವರ್ತೂರು ಕೋಡಿ ಮೇಲ್ಸೇತುವೆ ಹಾಗೂ ವರ್ತೂರು ವಿಲೇಜ್ ಎಲಿವೇಟೆಡ್ ಕಾರಿಡಾರ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟಿಡಿಆರ್ ಹಾಗೂ ಹೆಚ್ಚುವರಿ ಅನುದಾನದ ಸಮಸ್ಯೆಗಳ ಬಗ್ಗೆ ಹಿರಿಯ ಅಧಿಕಾರಿಗಳೊಡನೆ ಚರ್ಚಿಟಿ ಶೀಘ್ರವಾಗಿ ಅಗತ್ಯ ಅನುಮೋದನೆಗಳನ್ನು ಪಡೆದುಕೊಂಡು, ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ವಿಂಡ್ ಟನಲ್ ರಸ್ತೆ ಕಾಮಗಾರಿಗೆ ವೇಗ ನೀಡಿ:

ವಿಂಡ್ ಟನಲ್ ರಸ್ತೆಯಲ್ಲಿ ಜಲಮಂಡಳಿಯ ಪೈಪ್‌ಲೈನ್ ಸ್ಥಳಾಂತರ ಹಾಗೂ ಇತರೆ ಯುಟಿಲಿಟಿ ಸ್ಥಳಾಂತರ ಕಾಮಗಾರಿಗಳು ಪೂರ್ಣಗೊಂಡಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ನಿಯೋಜಿಸಿಕೊಂಡು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.

ಓಕಳೀಪುರಂ ಅಷ್ಟಪಥ ಕಾರಿಡಾರ್ ಕಾಮಗಾರಿ ಪರಿಶೀಲನೆ:

ಓಕಳೀಪುರಂ ಅಷ್ಟಪಥ ಕಾರಿಡಾರ್‌ನ ಬಾಕಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಳೆನೀರು ಕಾಲುವೆ ಪೈಪ್ ಪುಶಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಜೊತೆಗೆ ಅಪ್ರೋಚ್ ರಸ್ತೆ ಕಾಮಗಾರಿಯೂ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ನಿಯೋಜಿಸಿ ಕೆಲಸವನ್ನು ತ್ವರಿತಗೊಳಿಸಬೇಕು. ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ವಿವರವಾದ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಲಹಂಕ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ:

ಯಲಹಂಕ ಮೇಲ್ಸೇತುವೆ ಕಾಮಗಾರಿಯನ್ನು ಸೆಪ್ಟೆಂಬರ್ ತಿಂಗಳೊಳಗೆ ಪೂರ್ಣಗೊಳಿಸುವ ಉದ್ದೇಶದಿಂದ ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ನಿಯೋಜಿಸಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಾಮಗಾರಿಗೆ ಇನ್ನಷ್ಟು ವೇಗ ನೀಡಲು ಸಿಬ್ಬಂದಿ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಅಲ್ಲದೆ, ಪೊಲೀಸ್ ಠಾಣೆ ಬಳಿಯ ಸರ್ವೀಸ್ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ. ರ್ಯಾಂಪ್ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಕ್ರೇನ್, ಸಿಬ್ಬಂದಿ ಹಾಗೂ ಟೋಯಿಂಗ್ ವಾಹನ ವ್ಯವಸ್ಥೆ ಮಾಡಿದಲ್ಲಿ ಅನುಮತಿ ನೀಡುವುದಾಗಿ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಅದರಂತೆ ಅಗತ್ಯ ವ್ಯವಸ್ಥೆ ಮಾಡಿ ರ್ಯಾಂಪ್ ಕಾಮಗಾರಿ ತಕ್ಷಣ ಆರಂಭಿಸುವಂತೆ ಮುಖ್ಯ ಆಯುಕ್ತರು ಸೂಚನೆ ನೀಡಿದರು.

ಈಜಿಪುರ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ:

ಈಜಿಪುರ ಮೇಲ್ಸೇತುವೆ ಕಾಮಗಾರಿಗೆ ಹೆಚ್ಚಿನ ವೇಗ ನೀಡುವಂತೆ ಹಾಗೂ ಪ್ರತಿವಾರದ ಕಾಮಗಾರಿಗಳ ಚಟುವಟಿಕೆಗಳ ವೇಳಾಪಟ್ಟಿಯನ್ನು ನೀಡಿ, ಹೆಚ್ಚಿನ ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ನಿಯೋಜಿಸಿಕೊಂಡು, ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಸೂಚಿಸಿದರು.

ವರ್ತೂರು ಕೋಡಿ ಲೇಕ್ ಬೆಡ್ ರಸ್ತೆ ಕಾಮಗಾರಿಯನ್ನು ಜುಲೈ 21ರೊಳಗೆ ಪೂರ್ಣಗೊಳಿಸಲು ಸೂಚಿಸಿದ ಅವರು, ಬಿಗ್ ಬಜಾರ್ ಜಂಕ್ಷನ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಲು ತಿಳಿಸಿದರು.

ಮುಂದುವರೆದು, ಈ ಎಲ್ಲಾ ಪ್ರಮುಖ ಕಾಮಗಾರಿಗಳ ಬಗ್ಗೆ ಪ್ರತಿವಾರವೂ ಪ್ರಗತಿ ಪರಿಶೀಲನೆ ನಡೆಸಿ, ಕಾಲಕಾಲಕ್ಕೆ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ನಡೆಸಿಕೊಂಡು ಕೆಲಸ ಮಾಡಲು ಕ್ರಮವಹಿಸಲು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್, ಮುಖ್ಯ ಅಭಿಯಂತರರಾದ ಲೋಕೇಶ್, ವಿಜಯ್ ಕುಮಾರ್ ಹರಿದಾಸ್, ಹೇಮಲತಾ, ಯಮುನಾ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page