ಬೆಂಗಳೂರು: ಸಂಚಾರ ಸುರಕ್ಷತೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಮತ್ತು ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದರು.
ಸಚಿವರು ಇಂದು ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಬೆಂಗಳೂರಿನ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಂಗಳೂರಿನಲ್ಲಿ ಜನಸಂಖ್ಯೆಯ ವಾರ್ಷಿಕ ಬೆಳವಣಿಗೆ ದರ 3.7% ರಷ್ಟಿದ್ದರೆ, ವಾಹನಸಂಖ್ಯೆಯ ಬೆಳವಣಿಗೆ ದರ 10%ರಷ್ಟಿದೆ, ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ. ನಾಲ್ಕು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಟ್ರಾಫಿಕ್ ಪೊಲೀಸ್ 53 ಪೊಲೀಸ್ ಠಾಣೆಯನ್ನು ಹೊಂದಿದ್ದು, ಸುಮಾರು 1.25 ನೋಂದಾಯಿತ ವಾಹನಗಳಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸ್ ವ್ಯವಸ್ಥೆಯು ಸುಮಾರು 14,000 ಕಿಲೋಮೀಟರ್ ರಸ್ತೆ ಜಾಲದ ಟ್ರಾಫಿಕ್ ನಿರ್ವಹಿಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮಾಹಿತಿ ನೀಡಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಚಾರ ಪೊಲೀಸ್ ವಸ್ತುಸಂಗ್ರಾಹಾಲಯ ವೀಕ್ಷಿಸಿದರಲ್ಲೆ, ಕ್ಯಾಮರ ಟ್ರ್ಯಾಕಿಂಗ್ ವಿಭಾಗಕ್ಕೆ ಭೇಟಿ ನೀಡಿ ಕಾರ್ಯಾಚರಣೆಯನ್ನು ವೀಕ್ಷಿಸಿದರು.
ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕ (ಡಿಜಿ ಮತ್ತು ಐಜಿಪಿ) ಡಾ. ಎಂ.ಎ.ಸಲೀಂ, ಬೆಂಗಳೂರು ನಗರದ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
