ಬೆಂಗಳೂರು: ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗ ಆಧಾರದಲ್ಲಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ (ಪ್ರತಿಬಂಧಕ) ಮಸೂದೆ-2025’ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣ, ಪ್ರಚೋದನಕಾರಿ ಮಾತುಗಳು ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುತ್ತಿರುವುದನ್ನು ಗಮನಿಸಿರುವ ಸರ್ಕಾರ, ಇಂತಹ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದೆ. ದ್ವೇಷಾಪರಾಧ ಎಸಗಿದವರಿಗೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ರೂ.50 ಸಾವಿರ ದಂಡ ವಿಧಿಸಲಾಗುತ್ತದೆ.
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ (ಪ್ರತಿಬಂಧಕ) ಮಸೂದೆ-2025′, “ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ (ತಿದ್ದುಪಡಿ) ವಿಧೇಯಕ 2025”, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ (ತಿದ್ದುಪಡಿ) ವಿಧೇಯಕ 2025” ಕರಡು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯಿ ದತ್ತಿಗಳ (ತಿದ್ದುಪಡಿ) ವಿಧೇಯಕ 2025”, “ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇನ್ನಿತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025” ಒಟ್ಟು 8 ವಿಧೇಯಕಗಳ ಕರಡುಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಎಲ್ಲ ಮಸೂದೆಗಳನ್ನು ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
