ವಿಧಾನಸಭೆಯಿಂದ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಮತದಾನ ನಡೆದಿದ್ದು, ಶೇ.100 ರಷ್ಟು ಮತದಾನವಾಗಿದೆ.
ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಪ್ರತಿಪಕ್ಷ ನಾಯಕ ಆರ್. ಅಶೋಕ ಸೇರಿದಂತೆ ಎಲ್ಲಾ ಶಾಸಕರು ಮತ ಚಲಾಯಿಸಿದ್ದಾರೆ. 222 ವಿಧಾನಸಭಾ ಸದಸ್ಯರು ಮತದಾನ ಮಾಡಿದ್ದಾರೆ.
ಮತದಾನ ಪ್ರಾರಂಭವಾಗುವ ಮೊದಲು ಪ್ರತಿಪಕ್ಷ ನಾಯಕ ಆರ್. ಅಶೋಕ ಅವರ ಕಚೇರಿಯಲ್ಲಿ ನಡೆದ ಉಪಹಾರ ಸಭೆಯಲ್ಲಿ ಬಿಜೆಪಿ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಕಾಂಗ್ರೆಸ್ 120 ಶಾಸಕರಿಗೆ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್‌ಗೆ ತಮ್ಮ ಎರಡನೇ ಪ್ರಾಶಸ್ತ್ಯದ ಮತ ನೀಡುವಂತೆ ಸೂಚಿಸಿದೆ.
ಈ ನಡುವೆ ಜೆಡಿಎಸ್‌ನ ಕೆಲವು ಶಾಸಕರು ಅಡ್ಡ ಮತದಾನದ ಮೂಲಕ ವಿನಯ್ ಕಾರ್ತಿಕ್‌ಗೆ ಬೆಂಬಲ ನೀಡುವ ಸಾಧ್ಯತೆ ಇದೆ.
ಏಳು ಸ್ಥಾನಗಳಿಗೆ 8 ಅಭ್ಯರ್ಥಿಗಳು ಕಣದಲ್ಲಿದ್ದು, ನಾಲ್ವರು ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಇಬ್ಬರು ಬಿಜೆಪಿ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲ್ಲುವ ನಿರೀಕ್ಷೆ ಇದೆ. ಏಳನೇ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿಕೂಟ ಬೆಂಬಲಿತ ಕೆ. ಗೋವಿಂದರಾಜು ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ, ಬಿಜೆಪಿ ಉಚ್ಚಾಟಿತ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಮತ ಚಲಾಯಿಸಿದ ಬಳಿಕ ಮಾತನಾಡಿ, ಆತ್ಮಸಾಕ್ಷಿಯಂತೆ ಮತಚಲಾಯಿಸಿರುವುದಾಗಿ ತಿಳಿಸಿದ್ದಾರೆ.
