ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ಅನ್ನು ಅಧಿಸೂಚನೆ ಹೊರಡಿಸಿದ್ದು, ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ನಾಗರಿಕ ಸ್ನೇಹಿಯಾಗಿ ಮಾರ್ಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸಾರ್ವಜನಿಕರ ಸಹಾಯಕ್ಕಾಗಿ ಸಹಾಯವಾಣಿ:
ಡಿಸೆಂಬರ್ 1 ರಂದು ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯ ಮಂತ್ರಿಗಳು ಇ-ಸ್ವತ್ತು 2.O ತಂತ್ರಾಂಶಕ್ಕೆ ಚಾಲನೆ ನೀಡಿದ್ದು, ನಿಯಮಗಳಿಗೆ ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಹಾಯಕ್ಕಾಗಿ ಇಲಾಖೆಯಿಂದ ಸಹಾಯವಾಣಿ ಸಂಖ್ಯೆ 9483476000 ಯನ್ನು ಪ್ರಾರಂಭಿಸಲಾಗಿದ್ದು, ಪ್ರತಿದಿನ ಮೂರು ಸಾವಿರಕ್ಕೂ ಹೆಚ್ಚು ಕರೆಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಗುತ್ತಿದೆ.
ಸಹಾಯವಾಣಿಗೆ ಸಾರ್ವಜನಿಕರಿಂದ ಸ್ವೀಕೃತಿಯಾಗುತ್ತಿರುವ ಪ್ರಶ್ನೆಗಳಲ್ಲಿ ಹೆಚ್ಚಿನ ಪ್ರಶ್ನೆಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಅನುಮೋದನೆ ಪ್ರಕ್ರಿಯೆ, ಆಸ್ತಿ ವರ್ಗೀಕರಣವನ್ನು ಆಯ್ಕೆ ಮಾಡುವ ವಿಧಾನ, ಇ-ಸ್ವತ್ತು ನಮೂನೆ ವಿತರಿಸಲು ನಿಗದಿಯಾಗಿರುವ ಕಾಲಾವಧಿ ಹಾಗೂ ತಾಂತ್ರಿಕ ಸಮಸ್ಯೆಗಳಿಗೆ ಸಂಬಂಧಿಸಿದ್ದಾಗಿರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಇ-ಸ್ವತ್ತು 2.0 ರಡಿ ಅರ್ಜಿ ಸಲ್ಲಿಸಲು, ಸಂಬಂಧಿತ ದಾಖಲಾತಿ / ಪ್ರಕ್ರಿಯೆಯಲ್ಲಿ / ತಂತ್ರಾಂಶದ ಬಳಕೆಯ ಕುರಿತು ಸಂದೇಹಗಳಿದ್ದಲ್ಲಿ ತಮ್ಮ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು ಈ ಲಿಂಕ್ ಬಳಸಿಕೊಂಡು ಪಡೆಯಬಹುದಾಗಿದೆ: https://eswathu.karnataka.gov.in/Login.aspx
ಹಾಗೂ https://panchatantra.karnataka.gov.in ವೆಬ್ಸೈಟ್ ನಲ್ಲಿಯೂ ಪ್ರಕಟಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇ-ಸ್ವತ್ತು ನಾಗರಿಕ ಸ್ನೇಹಿಯಾಗಿ ಅನುಷ್ಠಾನ:
ಇ-ಸ್ವತ್ತು ಪ್ರಕ್ರಿಯೆ ಹಾಗೂ ತಂತ್ರಾಂಶವನ್ನು ಹೆಚ್ಚು ನಾಗರಿಕ ಸ್ನೇಹಿಯಾಗಿ ಅನುಷ್ಠಾನಗೊಳಿಸಲು ಇಲಾಖೆ ಬದ್ಧವಾಗಿದ್ದು, ಅದರನ್ವಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಿಲಾಗಿರುತ್ತದೆ. ಇವರೆಗೆ 365 ಆರ್ಜಿಗಳನ್ನು ಆನ್ ಲೈನ್ ಮೂಲಕ ಸ್ವೀಕರಿಸಲಾಗಿದ್ದು, ಮತ್ತಷ್ಟು ಸರಳಿಕರಿಸಲು ಕ್ರಮವಹಿಸಲಾಗುತ್ತಿದೆ.
ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ, ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿರುವುದಿಲ್ಲ, ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು ಸಮಸ್ಯೆ / ಸಂದೇಹಗಳನ್ನು ಬಗೆಹರಿಸಲು ಸರ್ಕಾರ ಬದ್ದವಾಗಿದೆ. ಸಾರ್ವಜನಿಕರ ಸಹಕಾರ ಅಗತ್ಯ ಎಂದು
ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
