ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ 2026ರ ಜುಲೈ 1 ರಂದು ಪತ್ರಿಕಾ ದಿನಾಚರಣೆ-2026 ಅನ್ನು ಹಮ್ಮಿಕೊಳ್ಳಲಾಗಿದೆ.
ಪತ್ರಿಕೋದ್ಯಮಕ್ಕೆ ನಾಂದಿ ಹಾಡಿದ ಬಾಸೆಲ್ ಮಿಷನ್‌ನ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಅವರು 1843 ರ ಜುಲೈ 1 ರಂದು ಪ್ರಕಟಿಸಿದ “ಮಂಗಳೂರು ಸಮಾಚಾರ” ಪತ್ರಿಕೆಯ ಸವಿನೆನಪಿಗಾಗಿ ಪ್ರತಿ ವರ್ಷ ಜುಲೈ 1 ಅನ್ನು ಕನ್ನಡ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ. 1996 ರಲ್ಲಿ ಅಂದಿನ ಪತ್ರಿಕಾ ಅಕಾಡೆಮಿ ಅಧ್ಯಕ್ಷರಾಗಿದ್ದ ದಿ. ಕೆ. ಶ್ರೀಧರ ಆಚಾರ್ ಅವರು ಈ ಪರಂಪರೆಯನ್ನು ಪ್ರಾರಂಭಿಸಿದ್ದು, ಅಂದಿನಿಂದ ನಾಡಿನಾದ್ಯಂತ ಇದನ್ನು ನಿರಂತರವಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು
ಬೆಂಗಳೂರಿನ ಗಾಂಧಿ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಜುಲೈ 01 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಕಾಡೆಮಿಯ ವಾರ್ಷಿಕ ವರದಿ ಬಿಡುಗಡೆ ಮಾಡಲಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಪಿ. ಸಿ. ಮೋಹನ್ ಹಾಗೂ ತೆಲಂಗಾಣ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಕೆ. ಶ್ರೀನಿವಾಸ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನೇಶ್ ಗುಂಡೂ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಚಾರ ಸಂಕಿರಣ ಮತ್ತು ಪ್ರಧಾನ ಭಾಷಣ:
ಪತ್ರಿಕಾ ದಿನಾಚರಣೆಯ ಅಂಗವಾಗಿ ಡಿಜಿಟಲ್ ಯುಗದಲ್ಲಿ ನಿಜ ಪತ್ರಕರ್ತರು ಯಾರು? ಎಂಬ ವಿಷಯದ ಕುರಿತು ವಿಶೇಷ ವಿಚಾರ ಸಂಕಿರಣ ಆಯೋಜಿಸಲಾಗಿದೆ. ‘ವಾರ್ತಾ ಭಾರತಿ’ಯ ಹಿರಿಯ ಪತ್ರಕರ್ತರಾದ ಅಬ್ದುಸ್ಸಲಾಂ ಪುತ್ತಿಗೆ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷರಾದ ಡಾ. ಆರ್. ಪೂರ್ಣಿಮಾ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಜಿ. ಸಿ. ಲೋಕೇಶ ಅವರು ಗೌರವ ಉಪಸ್ಥಿತರಿರಲಿದ್ದಾರೆ.
