ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತುಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಜಿರೊ ಟಾಲೆರೆನ್ಸ್ (Zero Tolerance) ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದು, ಡ್ರಗ್ಸ್ ವಿರುದ್ಧದ ಹೋರಾಟವನ್ನು ಕೇವಲ ಪೊಲೀಸ್ ಕ್ರಮಕ್ಕೆ ಸೀಮಿತಗೊಳಿಸದೆ, ಸಮಾಜದ ಎಲ್ಲ ವರ್ಗಗಳ ಸಹಭಾಗಿತ್ವದೊಂದಿಗೆ ವ್ಯಾಪಕ ಜನಾಂದೋಲನವಾಗಿ ರೂಪಿಸಲಾಗುತ್ತಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ – 2026ರ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಜ್ಜುಗೊಳಿಸಿದ್ದ ಸಮಾರಂಭದಲ್ಲಿ ಸಚಿವರು ಮಾತನಾಡುತ್ತಿದ್ದರು.
ಗೃಹ ಇಲಾಖೆ ಜಾರಿಗೆ ತಂದಿರುವ ಆಪರೇಷನ್ ರೈಸ್ (Operation RISE -Refuse, Inform, Support, Empower) ಕಾರ್ಯಕ್ರಮ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಾಗುವುದು, ಯುವಜನರಲ್ಲಿ ಜಾಗೃತಿ ಮೂಡಿಸಲು ವಿಶೇಷವಾಗಿ “ಬೇಡ BRO” ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು. ಈ ಅಭಿಯಾನದಡಿ ಕಾಲೇಜುಗಳು, ಶಾಲೆಗಳು, ವಿಶ್ವವಿದ್ಯಾಲಯಗಳು ಹಾಗೂ ಯುವ ಸಮುದಾಯ ಹೆಚ್ಚಿರುವ ಪ್ರದೇಶಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಡ್ರಗ್ಸ್ ಸೇವನೆಗೆ ಯುವಜನರಲ್ಲಿ ಸಹಪಾಠಿಗಳ ಒತ್ತಡ (ಪೀರ್ ಪ್ರೆಷರ್) ಪ್ರಮುಖ ಕಾರಣವಾಗುತ್ತಿದ್ದು, ಈ ಕುರಿತು ವಿಶೇಷ ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುವುದು, “ಒಬ್ಬ ಸ್ನೇಹಿತನ ತಪ್ಪು ಒತ್ತಡ ಜೀವನವನ್ನೇ ಹಾಳುಮಾಡಬಹುದು” ಎಂಬ ಸಂದೇಶವನ್ನು “ಬೇಡ BRO” ಅಭಿಯಾನದ ಮೂಲಕ ವ್ಯಾಪಕವಾಗಿ ತಲುಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಡ್ರಗ್ಸ್ ಜಾಲವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾವಿರಾರು ಕಾರ್ಯಾಚರಣೆಗಳನ್ನು ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ವಿದೇಶಿ ಪ್ರಜೆಗಳ ಮೂಲಕ ನಡೆಯುತ್ತಿರುವ ಅಕ್ರಮ ಡ್ರಗ್ಸ್ ಜಾಲದ ವಿರುದ್ಧವೂ ಫಾರಿನರ್ಸ್ ಆಕ್ಟ್ (Foreigners Act) ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.
ಮಾದಕ ವಸ್ತುಗಳ ವಿರುದ್ಧದ ಹೋರಾಟ ಕೇವಲ ಪೊಲೀಸ್ ಇಲಾಖೆಯ ಕೆಲಸವಲ್ಲ; ಇದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ. ನಮ್ಮ ಯುವಜನರ ಭವಿಷ್ಯ ರಕ್ಷಿಸಲು ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ‘ಬೇಡ BRO’ ಎಂಬುದು ಕೇವಲ ಅಭಿಯಾನವಲ್ಲ, ಯುವಜನರಿಗೆ ಬದುಕು ಉಳಿಸುವ ಸಾಮಾಜಿಕ ಸಂದೇಶವಾಗಿದೆ ಎಂದು ಹೇಳಿದರು.
ಇದುವರೆಗೆ ರಾಜ್ಯಾದ್ಯಂತ 6,651 ಜಾಗೃತಿ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, 5,090 ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಅಭಿಯಾನಗಳು ನಡೆದಿವೆ. ಜೊತೆಗೆ 1,406 ಸಂವೇದನಾಶೀಲ ಪ್ರದೇಶಗಳಲ್ಲಿ ವಿಶೇಷ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮಗಳು ಕೈಗೊಳ್ಳಲಾಗಿದೆ ಎಂದೂ ಈ ಸಂದರ್ಭದಲ್ಲಿ ಸಚಿವರು ತಿಳಿಸಿದರು.
ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ರಿಜ್ವಾನ್ ಅರ್ಷದ್, ಪೊಲೀಸ್ ಮಹಾನಿರ್ದೇಶಕ ಡಾ.ಎಂ. ಎ. ಸಲೀಂ, ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕರ್ನಾಟಕ ರಾಜ್ಯ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ಮುಂತಾದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
