ಬೆಂಗಳೂರು: ಅಪರಾಧ ಪ್ರಕರಣಗಳ ತ್ವರಿತ ಹಾಗೂ ವೈಜ್ಞಾನಿಕ ತನಿಖೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ (FSL) ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವುಗಳನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊಬೈಲ್ ವಿಧಿವಿಜ್ಞಾನ ಪ್ರಯೋಗಾಲಯಗಳು ಘಟನೆ ನಡೆದ ಸ್ಥಳದಲ್ಲಿಯೇ ವೈಜ್ಞಾನಿಕ ಸಾಕ್ಷ್ಯ ಸಂಗ್ರಹಿಸಲು ನೆರವಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ 32 ಮೊಬೈಲ್ ವಿಧಿವಿಜ್ಞಾನ ಪ್ರಯೋಗಾಲಯಗಳು ಹಾಗೂ 75 ಹೊಸ ಪೊಲೀಸ್ ವಾಹನಗಳನ್ನು ಸೇವೆಗೆ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದ ಮುಂಭಾಗದಲ್ಲಿ ಸಮರ್ಪಿಸಿದ ಸಂದರ್ಭದಲ್ಲಿ ಸಚಿವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಹೊಸ ವಾಹನಗಳನ್ನು ಬಳಸಿ ಅಪರಾಧ ಸ್ಥಳಗಳಿಗೆ ತ್ವರಿತವಾಗಿ ತಲುಪಿ ಸಾಕ್ಷ್ಯ ಸಂಗ್ರಹಿಸುವ ಕಾರ್ಯ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.
ವಿಧಿವಿಜ್ಞಾನ ಪ್ರಯೋಗಾಲಯಗಳ ಕಾರ್ಯನಿರ್ವಹಣೆ, ಅವುಗಳ ವೈಜ್ಞಾನಿಕ ಸಾಮರ್ಥ್ಯ ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲಿ ಅವುಗಳ ಪಾತ್ರ ಕುರಿತು ವಿವರಿಸಿರುವ ಸಚಿವರು, ಅಪರಾಧ ಪ್ರಕರಣಗಳಲ್ಲಿ ವೈಜ್ಞಾನಿಕ ಸಾಕ್ಷ್ಯಾಧಾರಗಳಿಗೆ ಇಂದು ಹೆಚ್ಚಿನ ಮಹತ್ವ ದೊರೆಯುತ್ತಿದ್ದು, ಅಪರಾಧಿಗಳಿಗೆ ಶಿಕ್ಷೆ ವಿಧಿಸುವಲ್ಲಿ ಹಾಗೂ ನಿರಪರಾಧಿಗಳಿಗೆ ನ್ಯಾಯ ಒದಗಿಸುವಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳು ಪ್ರಮುಖ ಪಾತ್ರವಹಿಸುತ್ತಿವೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಧಿವಿಜ್ಞಾನ ಸೇವೆಗಳನ್ನು ವಿಸ್ತರಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಸೇರಿದಂತೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಬಲಪಡಿಸಲಾಗುತ್ತಿದೆ; ಆಧುನಿಕ ಉಪಕರಣಗಳು, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಪರಿಣತ ಸಿಬ್ಬಂದಿಯ ನೆರವಿನಿಂದ ತನಿಖೆಯ ಗುಣಮಟ್ಟವನ್ನು ಹೆಚ್ಚಿಸಲಾಗುತ್ತಿದೆ.
ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ ಸಿಬ್ಬಂದಿಗೆ ನಿರಂತರ ತರಬೇತಿ, ಅತ್ಯಾಧುನಿಕ ಉಪಕರಣಗಳ ಬಳಕೆ, ತಾಂತ್ರಿಕ ಸಾಮರ್ಥ್ಯ ವೃದ್ಧಿ ಹಾಗೂ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ; ಪೊಲೀಸ್ ಇಲಾಖೆ, ವಿಧಿವಿಜ್ಞಾನ ತಜ್ಞರು ಹಾಗೂ ನ್ಯಾಯಾಂಗ ವ್ಯವಸ್ಥೆಯ ಸಮನ್ವಯದಿಂದ ತನಿಖಾ ಪ್ರಕ್ರಿಯೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ವಿವರಗಳನ್ನು ನೀಡಿದ್ದಾರೆ.
ರಾಜ್ಯದ ಎಲ್ಲಾ ವಿಭಾಗಗಳಲ್ಲಿ ವಿಧಿವಿಜ್ಞಾನ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಹೊಸ ಮೂಲಸೌಕರ್ಯ, ತಾಂತ್ರಿಕ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ತಿಳಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಜನರ ಸುರಕ್ಷತೆ ಮತ್ತು ನ್ಯಾಯದ ಭರವಸೆಯನ್ನು ಬಲಪಡಿಸುವಲ್ಲಿ ವಿಧಿವಿಜ್ಞಾನ ವಿಜ್ಞಾನದ ಪಾತ್ರ ಮಹತ್ತರವಾಗಿದ್ದು, ಈ ಕ್ಷೇತ್ರವನ್ನು ರಾಷ್ಟ್ರೀಯ ಮಟ್ಟದಲ್ಲಿ ಮಾದರಿಯಾಗಿ ಅಭಿವೃದ್ಧಿಪಡಿಸಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
