ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ಸಮುದಾಯದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರ ಸೇವಾ ಸಂಬಂಧಿತ ಸಮಸ್ಯೆಗಳು, ಕುಂದುಕೊರತೆಗಳು ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ, ಪ್ರತಿ ತಿಂಗಳ ಎರಡನೇ ಭಾನುವಾರದಂದು “ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದಿನ”ವನ್ನು ಕಡ್ಡಾಯವಾಗಿ ಆಚರಿಸಿ ಕುಂದುಕೊರತೆಗಳ ಆಲಿಕೆ ಸಭೆಗಳನ್ನು ನಿಯಮಿತವಾಗಿ ನಡೆಸುವಂತೆ ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ (ಡಿಜಿ & ಐಜಿಪಿ) ನಿರ್ದೇಶನ ನೀಡಿರುವ ಸಚಿವರು, ಈಗಾಗಲೇ ಸ್ಥಾಯಿ ಆದೇಶ ಸಂಖ್ಯೆ 1010, ದಿನಾಂಕ 17.11.2015ರ ಮೂಲಕ ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತಾಲಯಗಳು, ಜಿಲ್ಲಾ ಪೊಲೀಸ್ ಕಚೇರಿಗಳು, ಸಶಸ್ತ್ರ ಮೀಸಲು ಪಡೆಗಳು, ವಿಶೇಷ ಪೊಲೀಸ್ ಘಟಕಗಳು ಹಾಗೂ ಇತರೆ ಎಲ್ಲಾ ಪೊಲೀಸ್ ಸಂಸ್ಥೆಗಳಲ್ಲಿ ಪ್ರತಿ ತಿಂಗಳ ಎರಡನೇ ಭಾನುವಾರದಂದು ಎಸ್‌ಸಿ/ಎಸ್‌ಟಿ ಸಮುದಾಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರೊಂದಿಗೆ ಕುಂದುಕೊರತೆಗಳ ಆಲಿಕೆ ಸಭೆ ನಡೆಸಲು ಸೂಚನೆ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
ಆದರೆ, ಹಲವು ಕಡೆಗಳಲ್ಲಿ ಈ ಸಭೆಗಳು ನಿಯಮಿತವಾಗಿ ನಡೆಯುತ್ತಿಲ್ಲ ಎಂಬ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪೊಲೀಸ್ ಸಿಬ್ಬಂದಿಯವರ ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ರೂಪಿಸಲಾಗಿರುವ ಈ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಯಾಗುವುದು ಅತ್ಯಂತ ಅಗತ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.
ಪ್ರತಿ ಸಭೆಯಲ್ಲಿ ಸ್ವೀಕರಿಸಲಾದ ಮನವಿ, ದೂರುಗಳು ಹಾಗೂ ಅವುಗಳ ಕುರಿತು ಕೈಗೊಂಡ ಕ್ರಮಗಳ ವಿವರಗಳನ್ನು ದಾಖಲಿಸಿ ನಿರ್ವಹಿಸಬೇಕು. ತಕ್ಷಣವೇ ಪರಿಹರಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಬೇಕು. ಸರ್ಕಾರದ ಅಥವಾ ನೀತಿ ಮಟ್ಟದ ನಿರ್ಧಾರ ಅಗತ್ಯವಿರುವ ವಿಷಯಗಳನ್ನು ವಿಳಂಬವಿಲ್ಲದೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಶಿಫಾರಸು ಮಾಡಬೇಕು ಎಂದು ಸಚಿವರು ನಿರ್ದೇಶನ ನೀಡಿದ್ದಾರೆ.
ಎಸ್‌ಸಿ/ಎಸ್‌ಟಿ ಸಮುದಾಯದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಸೇವಾ ಹಿತಾಸಕ್ತಿ, ಕಲ್ಯಾಣ ಹಾಗೂ ನ್ಯಾಯಯುತ ಆಡಳಿತವನ್ನು ಖಚಿತಪಡಿಸುವ ನಿಟ್ಟಿನಲ್ಲಿ ಈ ಸಭೆಗಳು ಅತ್ಯಂತ ಮಹತ್ವದ್ದಾಗಿದ್ದು, ರಾಜ್ಯದ ಎಲ್ಲ ಪೊಲೀಸ್ ಘಟಕಗಳು ಪ್ರತಿ ತಿಂಗಳ ಎರಡನೇ ಭಾನುವಾರದಂದು ಯಾವುದೇ ಕಾರಣಕ್ಕೂ ತಪ್ಪದೇ ಸಭೆ ನಡೆಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಈ ನಿರ್ದೇಶನವನ್ನು ರಾಜ್ಯದ ಎಲ್ಲ ಪೊಲೀಸ್ ಘಟಕಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಡಿಜಿ ಮತ್ತು ಐಜಿಪಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
