ಸಮಗ್ರ ಸುದ್ದಿ

ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ.ಲಭ್ಯ: ಈಶ್ವರ ಖಂಡ್ರೆ

Share

ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗೆ 341 ಕೋಟಿ ರೂ. ಲಭ್ಯವಿದ್ದು, ಹಣಕಾಸಿನ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಕುಡಿಯುವ ನೀರು ಪೂರೈಕೆಗೆ 117 ಕೋಟಿ ರೂ.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂ. ಘೋಷಿಸಿದ್ದು ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದರು.

ಸಾಂಪ್ರದಾಯಿಕ ಜಲ ಮೂಲ ಬತ್ತಿ ಹೋಗಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರು ಪೂರೈಕೆಗೆ ತೊಡಕಾಗದಂತೆ ಪರ್ಯಾಯ ಜಲ ಮೂಲ ಗುರುತಿಸಲು, ಖಾಸಗಿ ಕೊಳವೆಬಾವಿ, ತೆರೆದ ಬಾವಿ ಬಾಡಿಗೆಗೆ ಪಡೆದು, ನೀರು ಪರೀಕ್ಷಿಸಿ, ಟ್ಯಾಂಕರ್ ಮೂಲಕ ನೀರು ಪೂರೈಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಜನರ ಸಂಕಷ್ಟ ಅರಿತು ಕಾರ್ಯ ನಿರ್ವಹಿಸಬೇಕು ಎಂದರು.

ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಿ, ಅದಕ್ಕೆ ಪಂಪ್ ಸೆಟ್ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿ ಎಂದು ಈಶ್ವರ ಖಂಡ್ರೆ ನಿರ್ದೇಶನ ನೀಡಿದರು.


Share

You cannot copy content of this page