ಸಮಗ್ರ ಸುದ್ದಿ

ಆಗಸ್ಟ್ 2 ರಂದು 3,991 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ: ಅಭ್ಯರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಶುಭಾಶಯ

Share

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ಬೃಹತ್ ನೇಮಕಾತಿ ಪ್ರಕ್ರಿಯೆಯ ಅಂಗವಾಗಿ, 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ ಆಗಸ್ಟ್ 2ರಂದು ನಡೆಯಲಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಸಂದೇಶ ಹಂಚಿಕೊಂಡಿರುವ ಸಚಿವರು, ನೇಮಕಾತಿಯಲ್ಲಿ ಉಳಿಕೆ ಮೂಲ ವೃಂದದ 3,395 ಹಾಗೂ ಕಲ್ಯಾಣ ಕರ್ನಾಟಕ ವೃಂದದ 596 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪರೀಕ್ಷೆ ಸಂಜೆ 4.00ರಿಂದ 5.30ರವರೆಗೆ ನಿಗದಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರೀಕ್ಷೆಯನ್ನು ನಡೆಸುತ್ತಿದ್ದು, ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10.00ರಿಂದ 11.30ರವರೆಗೆ ರಾಜ್ಯದಾದ್ಯಂತ 884 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯ ಸಮಯವನ್ನು ಮಧ್ಯಾಹ್ನ 2.30ರ ಬದಲು ಸಂಜೆ 4.00ರಿಂದ 5.30ರವರೆಗೆ ನಿಗದಿಪಡಿಸಲಾಗಿದ್ದು, ಇದಕ್ಕಾಗಿ 186 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭ ಹಾರೈಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಿಮ್ಮ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸಿದ್ಧತೆಗೆ ತಕ್ಕ ಯಶಸ್ಸು ದೊರೆಯಲಿ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿ, ಆತ್ಮಸ್ಥೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಎಂದು ಕರೆ ನೀಡಿದ್ದಾರೆ.

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ವಿಶ್ವಾಸಾರ್ಹವಾಗಿ ನಡೆಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ವಂಚನೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವರು, ಅಕ್ರಮ ಎಸಗಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಅಷ್ಟೇ ಅಲ್ಲದೆ, ಪರೀಕ್ಷೆಯಲ್ಲಿ ಅಕ್ರಮದಲ್ಲಿ ಭಾಗಿಯಾಗುವ ಅಭ್ಯರ್ಥಿಗಳಿಗೆ ಭವಿಷ್ಯದ ಯಾವುದೇ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಶಾಶ್ವತ ನಿಷೇಧ ವಿಧಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಪ್ರಾಮಾಣಿಕವಾಗಿ ಸಿದ್ಧತೆ ನಡೆಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ನ್ಯಾಯ ಒದಗಿಸುವುದು ಸರ್ಕಾರದ ಬದ್ಧತೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಹಾರ್ದಿಕ ಶುಭಾಶಯಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


Share

You cannot copy content of this page