ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ಇಂದು ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ.
ಅವರು ವಿಧಾನ ಪರಿಷತ್ತಿನ ಉಪ ಸಭಾಪತಿಯವರಿಗೆ ಅಧಿಕೃತ ರಾಜೀನಾಮೆ ಪತ್ರವನ್ನು ರವಾನಿಸಿ ಸ್ವಇಚ್ಛೆಯಿಂದ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಬಸವರಾಜ ಹೊರಟ್ಟಿ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು, ವಿಧಾನ ಪರಿಷತ್ತಿನಲ್ಲಿ ನಿರಂತರವಾಗಿ ಸುದೀರ್ಘ ಸೇವೆ ಸಲ್ಲಿಸಿದ ಅಪರೂಪದ ದಾಖಲೆ ಹೊಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಕ್ರೀಡಾ ಶಿಕ್ಷಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಹೊರಟ್ಟಿ ಅವರು
ಶಿಕ್ಷಕರ ಹಕ್ಕುಗಳು ಮತ್ತು ಕುಂದುಕೊರತೆಗಳಿಗಾಗಿ ಸಕ್ರಿಯವಾಗಿ ಹೋರಾಡುವ ಮೂಲಕ ಶಿಕ್ಷಕ ಸಮುದಾಯದ ಪ್ರಮುಖ ನಾಯಕರಾಗಿ ಹೊರಹೊಮ್ಮಿದರು.
1980ರಲ್ಲಿ ಪ್ರಥಮ ಬಾರಿಗೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಶಾಸಕರಾಗಿ ಆಯ್ಕೆಯಾಗಿ, ನಂತರ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ನಿರಂತರವಾಗಿ 8 ಬಾರಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದರು.
ದೇಶದಲ್ಲೇ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿ ಸತತವಾಗಿ ಇಷ್ಟೊಂದು ದೀರ್ಘಾವಧಿಗೆ (40 ವರ್ಷಗಳು ಹೆಚ್ಚು ಅವಧಿ ಸೇವೆ) ಆಯ್ಕೆಯಾದ ಅಪರೂಪದ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ದೀರ್ಘಕಾಲ ಜಾತ್ಯತೀತ ಜನತಾದಳ ಪಕ್ಷದಲ್ಲಿದ್ದು, ಪಕ್ಷದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ಮೇ 2022ರಲ್ಲಿ ಜೆಡಿಎಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರಿದರು.
2004–2006 ರ ಧರಂ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಹಾಗೂ 2006–2007 ರ ಎಚ್.ಡಿ. ಕುಮಾರಸ್ವಾಮಿ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾಗಿ ಹಲವು ಬಾರಿ ಕರ್ತವ್ಯ ನಿರ್ವಹಿಸಿದ್ದಾರೆ. ಸರಳತೆ, ಶಿಕ್ಷಕ ಸಮುದಾಯದ ಪರವಾದ ನಿರಂತರ ಹೋರಾಟ ಹಾಗೂ ಮೇಲ್ಮನೆಯ ನಡಾವಳಿಗಳ ಮೇಲಿನ ಅಪಾರ ಅನುಭವಕ್ಕಾಗಿ ಬಸವರಾಜ ಹೊರಟ್ಟಿ ಅವರು ಪಕ್ಷಾತೀತವಾಗಿ ಗೌರವಿಸಲ್ಪಟ್ಟಿದ್ದಾರೆ.
