ಮೈಸೂರು: ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶವು ಕೇವಲ ಸಾಹಿತ್ಯಿಕ ವಿಚಾರವಾಗಿ ಉಳಿಯದೆ, ಪ್ರತಿಯೊಬ್ಬರ ಬದುಕಿನ ನಿತ್ಯ ಮೌಲ್ಯವಾಗಬೇಕು. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯತೆಯ ಬೆಳಕು ಸದಾ ಬೆಳಗಿದಾಗ ಮಾತ್ರ ನೈಜ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ಸಾಕಾರಗೊಳ್ಳಲು ಸಾಧ್ಯ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.
ಮೈಸೂರಿನ ಕುವೆಂಪು ನಗರದ ಸೌಗಂಧಿಕ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ನ 2ನೇ ವರ್ಷದ ವಾರ್ಷಿಕೋತ್ಸವ, ಸಾಧಕರಿಗೆ ಪ್ರಶಸ್ತಿ ಪ್ರದಾನ, ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಕುವೆಂಪು ಅವರು ಪ್ರತಿಪಾದಿಸಿದ ವಿಚಾರಕ್ರಾಂತಿ ಮತ್ತು ತತ್ವಗಳು ಸಮಾಜದಲ್ಲಿನ ಶೋಷಣೆ ಹಾಗೂ ತಾರತಮ್ಯಗಳನ್ನು ತೊಡೆದುಹಾಕಲು ಪ್ರೇರಣೆಯಾಗಿವೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶಗಳು ತಲುಪಿದಾಗ ಮಾತ್ರ ಸಮಾನತೆ ಸಾಧ್ಯ ಎಂದರು.
ನಗರದ ನೈರ್ಮಲ್ಯ ಮತ್ತು ಸಾರ್ವಜನಿಕ ಆರೋಗ್ಯಕ್ಕಾಗಿ ಅಹೋರಾತ್ರಿ ಶ್ರಮಿಸುವ ಪೌರ ಕಾರ್ಮಿಕರನ್ನು ಗೌರವಿಸುವುದು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಪ್ರತಿಭಾವಂತರನ್ನು ಪ್ರೋತ್ಸಾಹಿಸುವುದು ಕುವೆಂಪು ಅವರ ಮೌಲ್ಯಗಳಿಗೆ ನೀಡುವ ನಿಜವಾದ ಗೌರವವಾಗಿದೆ ಎಂದು ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಹಾಕವಿ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಕರ್ನಾಟಕ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.
ಪೂಜ್ಯ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೂಜ್ಯ ಶ್ರೀ ಶಿವಾನಂದಪುರಿ ಸ್ವಾಮೀಜಿ, ಪೂಜ್ಯ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ಡಾ. ಸೋಮನಾಥ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಸಚಿವರಾದ ಎನ್. ಚಲುವರಾಯಸ್ವಾಮಿ, ಶಾಸಕರಾದ ಜಿ.ಟಿ. ದೇವೇಗೌಡ, ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್ ಹಾಗೂ ಶ್ರೀ ಡಾ. ತಿಮ್ಮಯ್ಯ, ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ಹೆಚ್.ಕೆ. ರಾಮು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
