ಸಮಗ್ರ ಸುದ್ದಿ

ಮುಂದಿನ ದಿನಗಳಲ್ಲಿ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌- ಸಚಿವ ಮಧು ಬಂಗಾರಪ್ಪ ಘೋಷಣೆ

Share

ಶಿವಮೊಗ್ಗ:ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವಾ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್‌ ಬುಕ್‌ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಗರದ ಸೈನ್ಸ್‌ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ʻಕಲಾಂ ಸೆಂಟರ್‌ʼಗೆ ಭೇಟಿ ನೀಡಿದ ಸಚಿವರು, ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಈ ಘೋಷಣೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ. ಆದರೆ ಎಲ್ಲವನ್ನೂ ಒಮ್ಮೆಲೆ ಮಾಡಲಾಗುವುದಿಲ್ಲ. ಹಂತ ಹಂತವಾಗಿ ರಾಜ್ಯದ ಎಲ್ಲಾ ಶಾಲೆ-ಪಿಯು ಕಾಲೇಜುಗಳಲ್ಲಿಯೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುತ್ತೇವೆ. ಇದಕ್ಕೆ ಅಗತ್ಯ ಎಲ್ಲ ಸೌಕರ್ಯಗಳನ್ನು ಒದಗಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಬೆರೆತು ಅವರ ಮಾತುಗಳನ್ನು ಕೇಳಿಸಿಕೊಂಡ ಸಚಿವರು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ, ಕಾಲೇಜಿನಲ್ಲಿ ತಾವು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡಾಗ ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ʻʻಮಕ್ಕಳೊಂದಿಗೆ ಸಂವಾದ ನಡೆಸುವುದು ನನಗೆ ಯಾವಾಗಲೂ ಖುಷಿಯ ವಿಷಯ. ನಾವು ನಿರೀಕ್ಷಿಸದೇ ಇರುವ ಪ್ರಶ್ನೆ, ಸಮಸ್ಯೆಗಳನ್ನು ಅವರು ನಮ್ಮ ಮುಂದಿಡುತ್ತಾರೆ. ಲವಲವಿಕೆಯ ವಾತಾವರಣ ನಿರ್ಮಿಸುತ್ತಾರೆ. ಇಂದು ಕೂಡ ಅದೇ ಆಯಿತುʼʼ ಎಂದು ಸಚಿವ ಮಧು ಬಂಗಾರಪ್ಪ ಈ ಸಂವಾದ ಕಾರ್ಯಕ್ರಮದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರ ಜೊತೆಗಿದ್ದರು.


Share

You cannot copy content of this page