ಸೊರಬ: ಸೊರಬ ತಾಲ್ಲೂಕಿನ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಎಸ್‌ಎಫ್‌ಸಿ ವಿಶೇಷ ಅನುದಾನ ಹಾಗೂ ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ ಒಟ್ಟು ₹1.02 ಕೋಟಿ ಅಂದಾಜು ಮೊತ್ತದ ಮೂರು ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇಂದು ಭೂಮಿಪೂಜೆ ನೆರವೇರಿಸಿದರು.
ಆನವಟ್ಟಿ ಪಟ್ಟಣ ಪಂಚಾಯಿತಿಯ ಎಸ್‌ಎಫ್‌ಸಿ ವಿಶೇಷ ಅನುದಾನದಡಿ ಕೆಪಿಎಸ್ ಶಾಲಾ ಆವರಣದಲ್ಲಿ ₹50 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಹಾಗೂ ₹30 ಲಕ್ಷ ವೆಚ್ಚದಲ್ಲಿ ನೇರಲಿಗೆ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ 2.0 ಯೋಜನೆಯಡಿ ಆನವಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮೀಪ ₹22.50 ಲಕ್ಷ ವೆಚ್ಚದಲ್ಲಿ ಸಮುದಾಯ ಶೌಚಾಲಯ ನಿರ್ಮಿಸಲಾಗುತ್ತಿದೆ.
ವಿದ್ಯಾರ್ಥಿಗಳಿಂದಲೇ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ
ಭೂಮಿಪೂಜೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಅವರು ವಿಶೇಷವಾಗಿ ವಿದ್ಯಾರ್ಥಿಗಳಿಂದಲೇ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. “ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಹಾಗಾಗಿ ಅವರೇ ದೀಪ ಬೆಳಗಲಿ” ಎಂದು ಹೇಳಿ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದರು.
ಬಳಿಕ ಸಚಿವರು ಆನವಟ್ಟಿ ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸಿದರು. ವಿದ್ಯಾರ್ಥಿಗಳು ಡೆಸ್ಕ್‌ಗಳ ಸೌಲಭ್ಯ, ಶೌಚಾಲಯ, ಸ್ಯಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್, ಕ್ರೀಡಾಂಗಣದ ಆಧುನೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದರು.
ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಸಚಿವರು, ಶಾಲೆಯ ಮೂಲಸೌಕರ್ಯಕ್ಕೆ ಸಂಬಂಧಿಸಿದ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸುವುದಾಗಿ ಭರವಸೆ ನೀಡಿದರು. ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಮುಂದಿನ ವರ್ಷದಿಂದ ಕೆಪಿಎಸ್ ಶಾಲೆಗೆ ಸರ್ಕಾರಿ ವಾಹನ
ಶಾಲಾ ಸಂಸತ್ತಿನ ವಿದ್ಯಾರ್ಥಿ ಪ್ರಧಾನಿ ಸಾನ್ವಿಕಾ ಅವರು, ಕೆಪಿಎಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆ ಮುಗಿದ ಬಳಿಕ ತಮ್ಮ ಊರುಗಳಿಗೆ ತೆರಳಲು ಸಮರ್ಪಕ ಬಸ್ ಸೌಲಭ್ಯ ಇಲ್ಲದಿರುವ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದರು.
ಇದಕ್ಕೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ ಅವರು, ಡಿಪೋ ಅಧಿಕಾರಿಗಳೊಂದಿಗೆ ಮಾತನಾಡಿ ಬಸ್ ಸೌಲಭ್ಯದ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದಿಂದ ಕೆಪಿಎಸ್ ಶಾಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಶಾಲಾ ವಾಹನದ ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದರು. ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಂದ ಆರಾಮವಾಗಿ ಶಾಲೆಗೆ ಬಂದು-ಹೋಗಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ ಕೆಪಿಎಸ್ ಶಾಲೆಗಳಲ್ಲಿ ಸ್ಯಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್
ಶಾಲೆಯಲ್ಲಿ ಸ್ಯಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್ ಅಳವಡಿಸುವಂತೆ ಶಾಲಾ ಸಂಸತ್ ಪ್ರಧಾನಿ ಸಾನ್ವಿಕಾ ಅವರು ಮಾಡಿದ ಮನವಿಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
“ಸ್ಯಾನಿಟರಿ ಪ್ಯಾಡ್ ಬರ್ನಿಂಗ್ ಮಿಷನ್ ಸ್ಥಾಪಿಸುವ ಸಲಹೆ ಉತ್ತಮ ಹಾಗೂ ಅಗತ್ಯವಾದ ಸಲಹೆಯಾಗಿದೆ. ರಾಜ್ಯದ ಎಲ್ಲ ಶಾಲೆಗಳಲ್ಲಿ, ವಿಶೇಷವಾಗಿ ಕೆಪಿಎಸ್ ಶಾಲೆಗಳಲ್ಲಿ ಈ ವ್ಯವಸ್ಥೆ ಅಳವಡಿಸುವ ಕುರಿತು ಚರ್ಚಿಸಲಾಗುವುದು. ಮುಂದಿನ ದಿನಗಳಲ್ಲಿ ಸೂಕ್ತ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು” ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರ ಕ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಆನವಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಕ್ಷತಾ, ತಹಶೀಲ್ದಾರ್ ಪುರಂದರ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ ಸೇರಿದಂತೆ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
