ಬೆಂಗಳೂರು:ಪ್ರತಿಪಕ್ಷಗಳ ಅಹೋರಾತ್ರಿ ಧರಣಿ ಹಿನ್ನೆಲೆ; ಉಭಯ ಸದನಗಳ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ.
ವಿಧಾನಸಭೆಯಲ್ಲಿ ಸಭಾಧ್ಯಕ್ಷ ಜಿ.ಸಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿ ಸಲ ಅಹಮದ್ ಘೋಷಿಸಿದರು.
ವಿಧಾನಸಭೆಯಲ್ಲಿಂದು ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಸದಸ್ಯರು ಸಭಾಧ್ಯಕ್ಷರ ಮುಂದಿನ ಬಾವಿಗೆ ಇಳಿದು ಧರಣಿ ನಡೆಸಿದರು.
ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಎಂಟು ವಿಧೇಯಕಗಳಿಗೆ ಅನುಮೋದನೆ ದೊರೆತಿದೆ.
ಬಳಿಕ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು ಜನ ಜಾನುವಾರುಗಳು ತತ್ತರಿಸಿವೆ. ಬರಪೀಡಿತ ಪ್ರದೇಶಗಳಲ್ಲಿ ಸೂಕ್ತ ಪರಿಹಾರ ಕಾಮಗಾರಿ ಕೈಗೊಳ್ಳುವ ಮೂಲಕ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.
ಸರ್ಕಾರ ಕಾಲಮಿತಿಯೊಳಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿ ಮುಗಿಸಿ ರಾಜ್ಯದ ಪಾಲಿನ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ ಜಿ.ಪರಮೇಶ್ವರ್ ಬರಪರಿಸ್ಥಿತಿಯ ಕುರಿತು ಮಾತನಾಡಿ, 1976 ರ ನಂತರ ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿ ಎದುರಾಗಿದೆ. 240 ತಾಲ್ಲೂಕುಗಳಲ್ಲಿ 175 ತಾಲ್ಲೂಕುಗಳಲ್ಲಿ ಮಳೆ ಕೊರತೆ ಎದುರಾಗಿದ್ದು 14 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಬರಪರಿಸ್ಥಿತಿ ಎದುರಿಸಲು ಸರ್ಕಾರ ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಬರ ಪೀಡಿತ ಪ್ರದೇಶಗಳಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಿ ಉದ್ಯೋಗ ಒದಗಿಸಲು 16 ಸಾವಿರದ 460 ಕಾಮಗಾರಿಗಳನ್ನು ಸೃಷ್ಟಿಸಲಾಗಿದೆ ಎಂದು ತಿಳಿಸಿದರು.
