ಸಮಗ್ರ ಸುದ್ದಿ

ಬೆಂಗಳೂರು ಸುಧಾರಣೆಗಾಗಿ ಒಂದು ತಂಡವಾಗಿ ಕೆಲಸ ಮಾಡೋಣ: ಕೃಷ್ಣ ಬೈರೇಗೌಡ! 8,000 ಕೋಟಿ ರೂ. ವೆಚ್ಚದಲ್ಲಿ 2,500 ಕಿ.ಮೀ. ರಸ್ತೆ ಅಭಿವೃದ್ಧಿ

Share

ಬೆಂಗಳೂರು:ಬೆಂಗಳೂರು ನಗರದ ಸುಧಾರಣೆಗಾಗಿ ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡಬೇಕೆಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳು, ಕಾರ್ಯಕ್ರಮಗಳು ಹಾಗೂ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಎಲ್ಲಾ ವಿಭಾಗಗಳ ಅಧಿಕಾರಿಗಳೊಂದಿಗೆ ಇಂದು ಕೌನ್ಸಿಲ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ನಾವು ಹಾಗೂ ಅಧಿಕಾರಿಗಳು ಒಗ್ಗಟ್ಟಾಗಿ ಒಂದು ತಂಡವಾಗಿ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಲ್ಲ. ಈ ನಿಟ್ಟಿನಲ್ಲಿ ನಗರದ ಸುಧಾರಣೆಗಾಗಿ ಒಂದು ತಂಡವಾಗಿ ಕೆಲಸ ಮಾಡೋಣ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಅವ್ಯವಸ್ಥೆಯೇ ವ್ಯವಸ್ಥೆಯಾಗಿ ಮಾರ್ಪಟ್ಟಿದ್ದು, ಅದನ್ನು ಬದಲಿಸುವ ಕೆಲಸ ಮಾಡಬೇಕು. ಅಧಿಕಾರಿಗಳು ಸರಿದಾರಿಗೆ ಬಂದರೆ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯವಾಗುತ್ತದೆ. ಇರುವ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ನಾಗರಿಕರು ಕೂಡ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ಹೇಳಿದರು.

ಸಚಿವರ ಹಂತದಲ್ಲಿ ಪ್ರತಿ ತಿಂಗಳು ಸಭೆ:

ಜನರು ಕಚೇರಿಗೆ ಬಂದು ಪರಿಹಾರ ಕಂಡುಕೊಳ್ಳುವ ಬದಲು, ಆಡಳಿತದಲ್ಲಿ ಸುಧಾರಣೆ ತಂದು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಸ್ಥಳದಲ್ಲಿಯೇ ಪರಿಹಾರ ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ನನ್ನ ಹಂತದಲ್ಲಿ ಪ್ರತಿ ತಿಂಗಳು ಸಭೆ ನಡೆಸುತ್ತೇನೆ. ಅದಲ್ಲದೆ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ಆಯುಕ್ತರು ಕೂಡ ಸಭೆಗಳನ್ನು ನಡೆಸಿ ನಿರ್ದಿಷ್ಟ ಸೂಚನೆಗಳನ್ನು ನೀಡಲಿದ್ದಾರೆ ಎಂದು ಹೇಳಿದರು.

ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ:

ನಗರದ ಪ್ರಮುಖ ರಸ್ತೆಗಳಾದ ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳಲ್ಲಿ ರಸ್ತೆ ಗುಂಡಿಗಳ ಸಮೀಕ್ಷೆ ನಡೆಸಿ ಅವುಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿದ ಬಳಿಕ ವಾರ್ಡ್ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಸಹಾಯ ತಂತ್ರಾಂಶ ಅಭಿವೃದ್ಧಿಪಡಿಸಿ:

ಸಹಾಯ 2.0 ತಂತ್ರಾಂಶದಲ್ಲಿ ದಾಖಲಾಗುವ ದೂರುಗಳನ್ನು ಕೂಡಲೇ ಬಗೆಹರಿಸುವ ಕೆಲಸ ಮಾಡಬೇಕು. ನಾಗರಿಕರಿಂದ ಬಂದಂತಹ ದೂರುಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಿದಲ್ಲಿ ಮಾತ್ರ ನಾಗರಿಕರಲ್ಲಿ ನಮ್ಮ ಮೇಲೆ ವಿಶ್ವಾಸ ಮೂಡಿಸಲು ಸಾಧ್ಯ. ಈ ನಿಟ್ಟಿನಲ್ಲಿ ದೂರುಗಳ ವಿಚಾರಕ್ಕೆ ಸಂಬಂಧಿಸಿದಂತೆ ನಿರಂತರ ಮೇಲ್ವಿಚಾರಣೆ ನಡೆಸುವುದರ ಜೊತೆಗೆ ಸಭೆಗಳನ್ನು ಕೂಡ ನಡೆಸಲಾಗುವುದು ಎಂದು ತಿಳಿಸಿದರು.

ಸಹಾಯ ತಂತ್ರಾಂಶದಲ್ಲಿ ನಾಗರಿಕರು ಈವರೆಗೆ 75,152 ದೂರುಗಳನ್ನು ದಾಖಲಿಸಿದ್ದಾರೆ. ಅದರಲ್ಲಿ 73,985 ದೂರುಗಳನ್ನು ಪರಿಹರಿಸಲಾಗಿದ್ದು, 1,152 ದೂರುಗಳು ಮಾತ್ರ ಬಾಕಿ ಉಳಿದಿವೆ. ಕೆಲವು ದೂರುಗಳು ಇತ್ಯರ್ಥಕ್ಕೆ ಸಮಯ ತೆಗೆದುಕೊಳ್ಳುತ್ತಿವೆ. ಅದಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳದೆ ತ್ವರಿತವಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದ್ದೇನೆ. ಹಿರಿಯ ಅಧಿಕಾರಿಗಳು ಬಗೆಹರಿಸಿದ ಕೆಲ ಸಮಸ್ಯೆಗಳನ್ನು ಮರುಪರಿಶೀಲನೆ ಮಾಡಿ, ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ನಾಗರಿಕರು ನೀಡುವ ದೂರುಗಳು ತ್ವರಿತವಾಗಿ ಇತ್ಯರ್ಥವಾಗುತ್ತಿಲ್ಲ. ಈ ಸಂಬಂಧ ಸಹಾಯ 2.0 ತಂತ್ರಾಂಶದಲ್ಲಿ ಅಗತ್ಯ ಬದಲಾವಣೆಗಳನ್ನು ತಂದು ಅಪ್‌ಗ್ರೇಡ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ ನಂತರ ನಾಗರಿಕರೊಂದಿಗೆ ಸಮಾಲೋಚನಾ ಸಭೆ ನಡೆಸಿ, ಅಗತ್ಯ ಬದಲಾವಣೆಗಳನ್ನು ಕೈಗೊಂಡು ಅದನ್ನು ಅನುಷ್ಠಾನಕ್ಕೆ ತರುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ವಿದ್ಯುತ್ ದೀಪಗಳನ್ನು ಅಳವಡಿಸದಿದ್ದರೆ ದಂಡ ವಿಧಿಸಿ:

ನಗರದಲ್ಲಿ ವಿದ್ಯುತ್ ದೀಪಗಳು ದುರಸ್ತಿಯಾಗಿರುವ ಕಡೆ ಕೂಡಲೇ ಹೊಸ ವಿದ್ಯುತ್ ದೀಪಗಳನ್ನು ಅಳವಡಿಸುವ ಕೆಲಸ ಮಾಡಬೇಕು. ಜೊತೆಗೆ ಎಲ್ಲಾ ಕಡೆ ತ್ವರಿತವಾಗಿ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸಬೇಕು. ಸಮರ್ಪಕವಾಗಿ ಕೆಲಸ ನಿರ್ವಹಿಸದ ಗುತ್ತಿಗೆದಾರರಿಗೆ ದಂಡ ವಿಧಿಸಬೇಕೆಂದು ಸೂಚನೆ ನೀಡಿದರು.

ಆಸ್ತಿ ತೆರಿಗೆ ಸಂಗ್ರಹ ಗುರಿ ಸಾಧಿಸಿ:

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ₹6,700 ಕೋಟಿ ಆಸ್ತಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದ್ದು, ಈ ಪೈಕಿ ಈವರೆಗೆ ₹3,382 ಕೋಟಿ (50.48%) ಸಂಗ್ರಹಿಸಲಾಗಿದೆ. ಬಾಕಿ ಇರುವ ಆಸ್ತಿ ತೆರಿಗೆಯನ್ನು ತ್ವರಿತಗತಿಯಲ್ಲಿ ಸಂಗ್ರಹಿಸುವ ಕೆಲಸ ಮಾಡಬೇಕು. ಜೊತೆಗೆ ಹಲವು ವರ್ಷಗಳಿಂದ ತೆರಿಗೆ ಪಾವತಿಸದ ಸುಸ್ತಿದಾರರಿಂದ ಹಾಗೂ ಪರಿಷ್ಕರಣೆ ಪ್ರಕರಣಗಳಿಂದ ತೆರಿಗೆ ವಸೂಲಿ ಮಾಡುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಪ್ರಗತಿ ಸಾಧಿಸದ ಕಂದಾಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದು ಸೂಚನೆ ನೀಡಿದರು.

ಕಾಮಗಾರಿಗಳ ವಿಭಾಗ:

8,000 ಕೋಟಿ ರೂ. ವೆಚ್ಚದಲ್ಲಿ 2,500 ಕಿ.ಮೀ. ರಸ್ತೆ ಅಭಿವೃದ್ಧಿ:

ನಗರದಲ್ಲಿ ಸಿಎಂಐಡಿಪಿ, ಎಸ್‌ಎಸ್‌ಐಪಿ, ವೈಟ್ ಟಾಪಿಂಗ್ ಸೇರಿದಂತೆ 8,000 ಕೋಟಿ ರೂ. ವೆಚ್ಚದಲ್ಲಿ ಸುಮಾರು 2,500 ಕಿ.ಮೀ. ರಸ್ತೆಗಳಿಗೆ ಡಾಂಬರೀಕರಣ ಹಾಗೂ ವೈಟ್ ಟಾಪಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೂಲಕ ರಸ್ತೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

200 ಕಿ.ಮೀ. ರಾಜಕಾಲುವೆ ಅಭಿವೃದ್ಧಿ:

ಜಿಬಿಎ ವ್ಯಾಪ್ತಿಯಲ್ಲಿ ಸುಮಾರು 840 ಕಿ.ಮೀ. ಉದ್ದದ ರಾಜಕಾಲುವೆ ಇದ್ದು, 640 ಕಿ.ಮೀ. ಉದ್ದದ ರಾಜಕಾಲುವೆಯನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಬಾಕಿ ಇರುವ 200 ಕಿ.ಮೀ. ರಾಜಕಾಲುವೆಯನ್ನು 2,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಅದಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಸಿಎಂಐಡಿ ಹಾಗೂ ಎಸ್‌ಐಪಿ ಅನುದಾನದಡಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಸಿವಿಲ್ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಗಳ ನಿರಂತರ ಮೇಲ್ವಿಚಾರಣೆ ನಡೆಸಿ, ಗುಣಮಟ್ಟ ಕಾಪಾಡಿಕೊಂಡು ಕೆಲಸ ಮಾಡಬೇಕು. ಯಾವುದೇ ಕಾರಣಗಳನ್ನು ನೀಡದೆ ಶ್ರದ್ಧೆಯಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸೆಂಟರ್ ಲೈನ್ ಮಾರ್ಕಿಂಗ್ ಕಡ್ಡಾಯ:

ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ರಸ್ತೆ ಮಾರ್ಕಿಂಗ್ ಮಾಡಲಾಗುತ್ತಿದೆ. ಆದರೆ ರಸ್ತೆಯ ಮಧ್ಯಭಾಗದಲ್ಲಿ ಮಾರ್ಕಿಂಗ್ ಮಾಡಲಾಗುತ್ತಿಲ್ಲ. ಈ ಸಂಬಂಧ 4 ಮೀಟರ್‌ಗಿಂತ ಹೆಚ್ಚು ಅಗಲವಿರುವ ರಸ್ತೆಗಳ ಮಧ್ಯಭಾಗದಲ್ಲಿ ಕಡ್ಡಾಯವಾಗಿ ಸೆಂಟರ್ ಲೈನ್ ಮಾರ್ಕಿಂಗ್ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾದಚಾರಿ ಮಾರ್ಗ ಒತ್ತುವರಿ ತೆರವು:

ನಗರದಲ್ಲಿ ಈವರೆಗೆ 1,175 ಕಿ.ಮೀ. ಉದ್ದದ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಬಾಕಿ ಇರುವ ರಸ್ತೆಗಳಲ್ಲಿ ಕೂಡ ತ್ವರಿತವಾಗಿ ತೆರವು ಕಾರ್ಯಾಚರಣೆ ನಡೆಸಬೇಕು. ಜೊತೆಗೆ ಮತ್ತೆ ಅತಿಕ್ರಮಣವಾಗದಂತೆ ಪರಿಣಾಮಕಾರಿಯಾಗಿ ನಿಯಂತ್ರಿಸಬೇಕು. ಅಲ್ಲದೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾರ್ಯವನ್ನು ಕೂಡ ಸಮಾನಾಂತರವಾಗಿ ಕೈಗೊಳ್ಳುವಂತೆ ಸೂಚನೆ ನೀಡಿದರು.

ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನ:

ನಗರದಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಸಂಬಂಧ ವಾರ್ಡ್ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ರಸ್ತೆ ಬದಿ ಹಾಗೂ ಪಾದಚಾರಿ ಮಾರ್ಗಗಳಲ್ಲಿರುವ ಸಣ್ಣಪುಟ್ಟ ತ್ಯಾಜ್ಯವನ್ನೂ ಪರಿಣಾಮಕಾರಿಯಾಗಿ ತೆರವುಗೊಳಿಸಿ, ನಗರವನ್ನು ಸ್ವಚ್ಛವಾಗಿಡುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ನೀಡಿದ ಇತರೆ ಪ್ರಮುಖ ನಿರ್ದೇಶನಗಳು:

ಅನುಮೋದನೆಗಾಗಿ ಬಾಕಿ ಇರುವ ಇ-ಖಾತಾ ಅರ್ಜಿಗಳನ್ನು ಕೂಡಲೇ ಅನುಮೋದಿಸಲು ಸೂಚನೆ. ಬಿ-ಖಾತಾದಿಂದ ಎ-ಖಾತಾಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಗೆ ವೇಗ ನೀಡಲು ಸೂಚನೆ. 40 ಅಡಿ ಹಾಗೂ ಅದಕ್ಕಿಂತ ಕಡಿಮೆ ಅಗಲವಿರುವ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳನ್ನು ಹೆಚ್ಚು ಎತ್ತರಿಸದೆ ನಿರ್ಮಿಸುವಂತೆ ಸೂಚನೆ. ರಸ್ತೆಯಲ್ಲಿ ಬೀಳುವ ನೀರು ಚರಂಡಿಯಲ್ಲಿ ಸರಾಗವಾಗಿ ಹರಿದುಹೋಗುವ ರೀತಿಯಲ್ಲಿ ಶೋಲ್ಡರ್ ಡ್ರೈನ್‌ಗಳನ್ನು ನಿರ್ಮಿಸಲು ಸೂಚನೆ.
ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಮತ್ತಷ್ಟು ವೇಗ ನೀಡಲು ಸೂಚನೆ. ಕಾಮಗಾರಿ ನಡೆಯುತ್ತಿರುವ ಕಡೆ ನಿರ್ಮಾಣ ಸಾಮಗ್ರಿಗಳನ್ನು ಪಾದಚಾರಿಗಳಿಗೆ ತೊಂದರೆಯಾಗದಂತೆ ಇಡಬೇಕು.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ನಿತೀಶ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಜಿ. ಜಗದೀಶ್, ಡಾ. ರಾಜೇಂದ್ರ ಕೆ.ವಿ., ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ, ಅಪರ ಆಯುಕ್ತರು, ಜಂಟಿ ಆಯುಕ್ತರು, ಅಭಿಯಂತರರು, ಕಂದಾಯ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಸೇರಿದಂತೆ ಎಲ್ಲಾ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Share

You cannot copy content of this page