ಬೆಂಗಳೂರು:ರಾಜ್ಯದಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆ, ಇಲಾಖೆಯ ಆಡಳಿತದಲ್ಲಿ ತಂತ್ರಜ್ಞಾನಗಳ ಅಳವಡಿಕೆ ಇದೆಲ್ಲವನ್ನೂ ಗಮನಿಸಿಯೇ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಬೃಹತ್ ಆರ್ಥಿಕ ನೆರವು ನೀಡುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ಈ ಬ್ಯಾಂಕ್ ಇಷ್ಟೊಂದು ನೆರವು ನೀಡಿರುವುದು ದೇಶದಲ್ಲಿಯೇ ಇದು ಮೊದಲು. ಇಲಾಖೆಯ ಈ ಯಶಸ್ಸಿಗೆ ಶಿಕ್ಷಕರೇ ಕಾರಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯದಾದ್ಯಂತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಒಂದು ಸಾವಿರ ಕೆಪಿಎಸ್ ಶಾಲೆಗಳನ್ನು ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ ₹2,500 ಕೋಟಿ ವೆಚ್ಚ ಮಾಡಲಾಗುತ್ತಿದೆ. ಪೂರ್ವ ಪ್ರಾಥಮಿಕದಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಒದಗಿಸುವುದು ಕೆಪಿಎಸ್‌ನ ಪ್ರಮುಖ ಉದ್ದೇಶವಾಗಿದೆ ಎಂದು ಸಚಿವರು ವಿವರಿಸಿದರು.
ಕೆಪಿಎಸ್ ಶಾಲೆಗಳಿಗೆ ಸರ್ಕಾರದಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಕೆಪಿಎಸ್ ಎಂದರೆ ಕೇವಲ ಹೊಸ ಕಟ್ಟಡವಲ್ಲ. ಗುಣಮಟ್ಟದ ಶಿಕ್ಷಣ, ಉತ್ತಮ ಮೂಲಸೌಕರ್ಯ, ಆಧುನಿಕ ಕಲಿಕಾ ವಾತಾವರಣ ಮತ್ತು ಸರ್ಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸವನ್ನು ಹೆಚ್ಚಿಸುವ ಸಮಗ್ರ ಪ್ರಯತ್ನವಾಗಿದೆ ಎಂದರು.
ಶಿಕ್ಷಕಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಇದನ್ನು ಅರಿತು, ಶಿಕ್ಷಕ ವೃಂದ ನಿರಂತರ ಬದಲಾವಣೆಗೆ ಹೊಂದಿಕೊಳ್ಳುತ್ತಿದ್ದಾರೆ. ಸರ್ಕಾರ ಜಾರಿಗೊಳಿಸುತ್ತಿರುವ ಸುಧಾರಣೆಗಳನ್ನು ಸಮರ್ಥವಾಗಿ ಅನುಷ್ಠಾನಗೊಳಿಸುತ್ತಿದ್ದಾರೆ, ಇವರೆಲ್ಲರನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಈ ಬಾರಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯ ಫಲಿತಾಂಶದಲ್ಲಿ ಚಾರಿತ್ರಿಕ ದಾಖಲೆ ಬರೆಯಲಾಗಿತ್ತು.ಇದಕ್ಕೆ ಶಿಕ್ಷಕರೇ ಕಾರಣ ಎಂದು ಹೇಳಿದ ಶ್ರೀ ಮಧು ಬಂಗಾರಪ್ಪ
ಶಿಕ್ಷಕರ ನೇಮಕಾತಿಗೆ ಆದ್ಯತೆ
ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯ ಶಿಕ್ಷಕರು ಇರಬೇಕು ಎಂಬುದು ಸರ್ಕಾರದ ಸ್ಪಷ್ಟ ನಿಲುವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ವಿಶೇಷವಾಗಿ ಇದೇ ಮೊದಲ ಬಾರಿಗೆ 1ರಿಂದ 8ನೇ ತರಗತಿವರೆಗೆ ಬೋಧಿಸಲು ಕಂಪ್ಯೂಟರ್ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಮತ್ತಷ್ಟು 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತಾವನೆಗೆ ಅನುಮೋದನೆ ದೊರೆತರೆ ಶಿಕ್ಷಣ ಇಲಾಖೆಯಲ್ಲೇ ಸುಮಾರು 18ರಿಂದ 19 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಲಿದೆ. ಹಿಂದಿನ ಸರ್ಕಾರ ಅರ್ಧಕ್ಕೆ ನಿಲ್ಲಿಸಿದ್ದ 13 ಸಾವಿರ ಶಿಕ್ಷಕರ ನೇಮಕಾತಿಯನ್ನೂ ಪೂರ್ಣಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.
“ಇದು ಕೇವಲ ಹುದ್ದೆಗಳ ಭರ್ತಿಯಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು, ಶಿಕ್ಷಕರ ಮೇಲಿನ ಕೆಲಸದ ಒತ್ತಡ ಕಡಿಮೆ ಮಾಡುವುದು ಹಾಗೂ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳುತ್ತಿರುವ ಮಹತ್ವದ ಹೆಜ್ಜೆಯಾಗಿದೆ” ಎಂದು ಅವರು ಹೇಳಿದರು.
ಶಿಕ್ಷಣದಲ್ಲಿ AI ಮತ್ತು ಕೌಶಲ್ಯಾಧಾರಿತ ಕಲಿಕೆಗೆ ಒತ್ತು
2026-27ನೇ ಸಾಲಿನಲ್ಲಿ 9ನೇ ತರಗತಿ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ಆರಂಭಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಇದನ್ನು 9ರಿಂದ 12ನೇ ತರಗತಿವರೆಗೆ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು. ಅದೇ ರೀತಿ, 2026-27ನೇ ಸಾಲಿನಿಂದ 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣವನ್ನು ಆರಂಭಿಸಲಾಗಿದೆ ಎಂದರು.
ವಿದ್ಯಾರ್ಥಿ ಸ್ನೇಹಿ ಸರ್ಕಾರ
ಯಾವುದೇ ಮಗು ಆರ್ಥಿಕ ಕಾರಣದಿಂದ ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲು ಇದೇ ಮೊದಲ ಬಾರಿಗೆ ಸರ್ಕಾರ ಆದೇಶಿಸಿದೆ ಎಂದು ಮಧು ಬಂಗಾರಪ್ಪ ಹೇಳಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು.
ದ್ವಿಭಾಷಾ ಮಾಧ್ಯಮ
2026-27ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳು (KPS) ಹಾಗೂ PM SHRI ಶಾಲೆಗಳಲ್ಲಿ ಹಾಗೂ 15 ಜಿಲ್ಲೆಗಳ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ಪಾಠ ಮಾಡುವ ಶಿಕ್ಷಕರಿಗೆ ನಿರಂತರವಾಗಿ ತರಭೇತಿ ನೀಡಲು ವಿಶೇಷ ಕಾರ್ಯಕ್ರಮವನ್ನೇ ಹಮ್ಮಿಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಶಿಕ್ಷಕರ ಕಲ್ಯಾಣಕ್ಕೆ ಅಗತ್ಯವಿರುವ ಎಲ್ಲ ರೀತಿಯ ಬೆಂಬಲವನ್ನು ನೀಡಲು ಸರ್ಕಾರ ಬದ್ಧವಾಗಿದೆ. ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಮಹತ್ತರ ಸೇವೆಗೆ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುವುದಾಗಿ ಮಧು ಬಂಗಾರಪ್ಪ ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ನೆರವೇರಿಸಿದರು. ಅವರು ಸಾವಿತ್ರಿಬಾಯಿ ಫುಲೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಗಳಿಗೆ ವೇದಿಕೆಯ ಎಲ್ಲ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
