ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ನೂತನ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರನ್ನು ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಿಜ್ವಾನ್ ಅರ್ಷದ್ ಅವರು, “ದೇಶದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಆಶಯದೊಂದಿಗೆ ಅಂದಿನ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆಯ ಮೂಲಕ ಬಡವರು ಹಾಗೂ ದುರ್ಬಲ ವರ್ಗದ ಜನರಿಗೆ ಆಹಾರದ ಹಕ್ಕನ್ನು ಖಾತ್ರಿಪಡಿಸಿ, ದೇಶದ ಆಹಾರ ಭದ್ರತೆಗೆ ಮಹತ್ವದ ಕೊಡುಗೆ ನೀಡಲಾಯಿತು” ಎಂದು ಹೇಳಿದರು.
“ಅದೇ ಜನಪರ ಆಶಯವನ್ನು ಕರ್ನಾಟಕದಲ್ಲಿಯೂ ಮುಂದುವರಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತಂದಿದೆ. ಬಡವರ ಮನೆಗೆ ಅನ್ನ ತಲುಪಬೇಕು ಹಾಗೂ ಯಾವುದೇ ಕುಟುಂಬವೂ ಹಸಿವಿನಿಂದ ಬಳಲಬಾರದು ಎಂಬುದೇ ಈ ಯೋಜನೆಯ ಮೂಲ ಉದ್ದೇಶ” ಎಂದು ಸಚಿವರು ತಿಳಿಸಿದರು.
ಆಹಾರ ಭದ್ರತಾ ಕಾಯ್ದೆ ಹಾಗೂ ಅನ್ನಭಾಗ್ಯ ಯೋಜನೆಗಳು ಕೇವಲ ಸರ್ಕಾರಿ ಯೋಜನೆಗಳಲ್ಲ. ಬಡವರ ಅನ್ನದ ಹಕ್ಕನ್ನು ರಕ್ಷಿಸಿ, ಪ್ರತಿಯೊಂದು ಅರ್ಹ ಕುಟುಂಬಕ್ಕೂ ಆಹಾರ ಭದ್ರತೆ ಒದಗಿಸುವ ಕಾಂಗ್ರೆಸ್ ಸರ್ಕಾರದ ಜನಪರ ಬದ್ಧತೆಯ ಪ್ರತೀಕಗಳಾಗಿವೆ ಎಂದು ಅವರು ಹೇಳಿದರು.
ಪಡಿತರ ವಿತರಕರ ಜವಾಬ್ದಾರಿಯ ಕುರಿತು ಮಾತನಾಡಿದ ಸಚಿವರು, “ಅರ್ಹ ಫಲಾನುಭವಿಗಳಿಗೆ ಸರ್ಕಾರದ ಪಡಿತರವನ್ನು ಸಮರ್ಪಕವಾಗಿ ತಲುಪಿಸುವುದು ನಿಮ್ಮ ಪ್ರಮುಖ ಜವಾಬ್ದಾರಿ. ಪಡಿತರ ವಿತರಣೆಯಲ್ಲಿ ಯಾವುದೇ ಲೋಪ, ಅಕ್ರಮ ಅಥವಾ ವ್ಯತ್ಯಾಸ ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಫಲಾನುಭವಿಗಳ ಹಕ್ಕಿನ ಪಡಿತರ ಸಂಪೂರ್ಣವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಪಡಿತರ ವಿತರಕರ ಕರ್ತವ್ಯ. ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಿಮ್ಮೆಲ್ಲರ ಸಹಕಾರ ಅತ್ಯಂತ ಮುಖ್ಯ” ಎಂದು ಸ್ಪಷ್ಟಪಡಿಸಿದರು.
ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಎದುರಾಗುತ್ತಿರುವ ಸರ್ವರ್ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇ-ಪಾಸ್ (e-POS) ಯಂತ್ರಗಳ ಅಳವಡಿಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಪಡಿತರ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಬಲಪಡಿಸುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ಯಾವುದೇ ಅಡೆತಡೆಯಿಲ್ಲದೆ ತಲುಪುವಂತೆ ಮಾಡುವುದು ಹಾಗೂ ಪಡಿತರ ವಿತರಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರಾದ ಶ್ರೀ ಟಿ. ಕೃಷ್ಣಪ್ಪ, ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
