ಬೆಂಗಳೂರು :ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ 2026 ನೇ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10.00 ಗಂಟೆಗೆ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದು ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಸಲೀಂ ಅಹ್ಮದ್ ಮತ್ತು ವಿಧಾನಸಭೆಯ ಸಭಾಧ್ಯಕ್ಷರಾದ ಜಿ.ಎಸ್. ಪಾಟೀಲ್ ಅವರ ಘನ ಉಪಸ್ಥಿತಿಯಲ್ಲಿ ಆಹಾರ ಹಾಗೂ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಸಮಾಜ ಕಲ್ಯಾಣ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಪಸ್ಥಿತರಿರುವರು.
ಈ ಕಾರ್ಯಕ್ರಮದಲ್ಲಿ ಸಚಿವ ಸಂಪುಟದ ಎಲ್ಲಾ, ಸಚಿವರು, ಮಾನ್ಯ ಶಾಸಕರು, ರಾಜ್ಯದ ಎಲ್ಲಾ ಸಂಸದರು, ವಿಧಾನಪರಿಷತ್ ಸದಸ್ಯರು, ಹಾಗೂ ಎಲ್ಲಾ ಆಯೋಗ, ನಿಗಮ, ಮಂಡಳಿಗಳ ಅಧ್ಯಕ್ಷರು ಮತ್ತು ಸದಸ್ಯರು, ವಿಧಾನಸಭೆಯ ಮತ್ತು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಮೋಹನ್ ರಾಜ್ ಕೆ.ಪಿ., ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಪಿ. ಹರಿಶೇಖರನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಉಪಸ್ಥಿತರಿರುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
