ಗಂಗಾವತಿ:ಜನರ ಬಳಿಗೆ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಚಯಿಸಿರುವ ಪ್ರಜಾಸೇವಾ ಆಂದೋಲನ ಜನಸಾಮಾನ್ಯರ ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಸ್ಪಂದಿಸುವ ಪರಿಣಾಮಕಾರಿ ವೇದಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದರು.
ಗಂಗಾವತಿಯಲ್ಲಿ ಪ್ರಜಾಸೇವಾ ಆಂದೋಲನದ ಅಂಗವಾಗಿ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಪ್ರಜಾಸೇವಾ ಆಂದೋಲನವನ್ನು ಪರಿಚಯಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈವರೆಗೆ ಪ್ರಜಾಸೇವಾ ಆಂದೋಲನದಲ್ಲಿ 3000ಕ್ಕೂ ಹೆಚ್ಚು, ಅರ್ಜಿಗಳು ಸ್ವೀಕೃತವಾಗಿದ್ದು, 880ಕ್ಕೂ ಹೆಚ್ಚು ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಉಳಿದ 413 ಅರ್ಜಿಗಳು ವಿಚಾರಣಾ ಹಂತದಲ್ಲಿವೆ. ಕಾನೂನುಬದ್ಧವಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಶೀಘ್ರವಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಮುಂದಿನ ಕಾರ್ಯಕ್ರಮದಲ್ಲಿ ಹಿಂದಿನ ಅರ್ಜಿ ವಿಲೇ ಮಾಹಿತಿ ನೀಡಿ:
ಮುಂದಿನ ಪ್ರಜಾಸೇವಾ ಸಭೆಯಲ್ಲಿ ಹಿಂದಿನ ಸಭೆಯಲ್ಲಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿ ಕುರಿತು ಸಮಗ್ರ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಧಿಕಾರಿಗಳ ಹಂತದಲ್ಲೇ ಸಮಸ್ಯೆ ಬಗೆಹರಿಸಿ
ಜನರು ತಮ್ಮ ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಜಿಲ್ಲೆ ಅಥವಾ ರಾಜ್ಯ ಮಟ್ಟದ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರಬಾರದು. ಅಧಿಕಾರಿಗಳ ಹಂತದಲ್ಲೇ ಬಗೆಹರಿಸಬಹುದಾದ ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಬೇಕು.
“ಅಧಿಕಾರಿಗಳು ಜನರ ಸೇವೆಗಾಗಿ ಇದ್ದೀರಿ. ನೀವು ಮೇಲಿಂದ ಇಳಿದು ಬಂದವರಲ್ಲ. ಜನರಿಗೆ ಸ್ಪಂದಿಸಿ, ಅವರ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ನಮಗೆ ಪ್ರತಿ ಐದು ವರ್ಷಕ್ಕೊಮ್ಮೆ ಜನರ ಮುಂದೆ ಪರೀಕ್ಷೆ ಬರುತ್ತದೆ. ನೀವು ಕೂಡ ನಿಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು,” ಎಂದು ಅಧಿಕಾರಿಗಳಿಗೆ ಸಚಿವ ತಂಗಡಗಿ ತಾಕೀತು ಮಾಡಿದರು.
**ಕಿಷ್ಕಿಂದೆಯಲ್ಲಿ ಸಚಿವ ಸಂಪುಟ ಸಭೆ:ಜಿಲ್ಲಾ ಕೇಂದ್ರಗಳಲ್ಲೇ ಸಚಿವ ಸಂಪುಟ ಸಭೆ
ಹಿಂದೆ ವಿಭಾಗ ಮಟ್ಟದಲ್ಲಿ ನಡೆಯುತ್ತಿದ್ದ ಸಚಿವ ಸಂಪುಟ ಸಭೆಯನ್ನು ಜಿಲ್ಲಾ ಕೇಂದ್ರಗಳಲ್ಲಿಯೂ ನಡೆಸುವ ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೈಗೊಂಡಿದ್ದಾರೆ. ಆಡಳಿತವನ್ನು ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸದೆ ಜನರ ಬಳಿಗೆ ಕೊಂಡೊಯ್ಯುವ ಈ ಕ್ರಮದಿಂದ ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ. ಮುಂದಿನ ದಿನಗಳಲ್ಲಿ ಕಿಷ್ಕಿಂದೆಯಲ್ಲಿ ಸಚಿವ ಸಂಪುಟ ಸಭೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ
ರಾಜ್ಯ ಸರ್ಕಾರವು ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನಗಳನ್ನು ಒದಗಿಸುವ ನಿಟ್ಟಿನಲ್ಲಿ ತೀರ್ಮಾನ ಕೈಗೊಂಡಿದ್ದು, ಇದಕ್ಕಾಗಿ ಅಗತ್ಯ ಜಾಗ ಗುರುತಿಸುವ ಕಾರ್ಯ ನಡೆಯುತ್ತಿದೆ. ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ವಿಲೇವಾರಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕ ಜಿ.ಜನಾರ್ದನ್ ರೆಡ್ಡಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪಂಚಾಯತ್ ಸಿಇಓ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಗಂಗಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಇಸ್ಮಾಯಿಲ್ ಖಾದ್ರಿ, ಪಿಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ದೊಡ್ಡಪ್ಪ ದೇಸಾಯಿ ಇನ್ನಿತರರಿದ್ದರು.
—2000 ಕ್ಯುಸೆಕ್ ನೀರು ಬಿಡುಗಡೆಗೆ ಸೂಚನೆ:
ಜಿಲ್ಲೆಯಲ್ಲಿ ಮತ್ತೆ ನೀರು ಪೂರೈಕೆಯಲ್ಲಿ ಸವಾಲು ಎದುರಾಗುತ್ತಿದೆ. ನಮ್ಮಲ್ಲಿ ಮಳೆ ಆಗುತ್ತಿಲ್ಲ. ಮಲೆನಾಡು ಭಾಗದಲ್ಲಿ ಮಳೆ ಕೊರತೆ ಮುಂದುವರೆದಿದೆ. ಸಿಂಧನೂರ ಮತ್ತು ರಾಯಚೂರು ಭಾಗಕ್ಕೆ ನೀರು ಬರುತ್ತಿಲ್ಲ ಎಂದು ಅಲ್ಲಿನ ರೈತರು ಒತ್ತಾಯ ಮಾಡುತ್ತಿದ್ದಾರೆ. ರೈತರ ಅಪೇಕ್ಷೆಯಂತೆ ನಾಲ್ಕಾರು ದಿನಗಳ ಕಾಲ 2000 ಕ್ಯುಸೆಕ್ ನೀರು ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ, ಪಿಂಚಣಿ, ವಸತಿ, ರಸ್ತೆ, ಕುಡಿಯುವ ನೀರು, ವಿದ್ಯುತ್, ಶಿಕ್ಷಣ, ಆರೋಗ್ಯ, ಸಾಮಾಜಿಕ ಭದ್ರತೆ ಸೇರಿದಂತೆ ಸಾರ್ವಜನಿಕರಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅಹವಾಲುಗಳು ಸಲ್ಲಿಕೆಯಾದವು.
