ಉಡುಪಿ: ನಮ್ಮ ಸರ್ಕಾರ ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡಲು ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಬಳಿ ಹೋಗಿ ಸೇವೆ ನೀಡಬೇಕು ಎಂಬ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಜಾರಿಗೆ ತಂದಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು.
ಇಂದು ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಕಾಪು ಇವರ ವತಿಯಿಂದ ಕಾಪು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಗ್ರಾಮೀಣ ಜನರ ಸಂಕಷ್ಟಕ್ಕೆ ನಿಗಧಿತ ಕಾಲಾವಧಿಯಲ್ಲಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಿ, ಜನಸಾಮಾನ್ಯರ ಸಮಸ್ಯೆ ಹಾಗೂ ಅಹವಾಲುಗಳಿಗೆ ಪರಿಹಾರ ಕಲ್ಪಿಸುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು.
ಜನರಿಂದ ಆಯ್ಕೆಯಾದ ಜನಪ್ರತಿಧಿಗಳು ಹಾಗೂ ಸರ್ಕಾರಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಜನರ ಬಳಿಗೆ ಬಂದು ಅವರ ಅಹವಾಲುಗಳನ್ನು ಅವರಿರುವಲ್ಲಿ ಆಲಿಸಿ, ಸ್ಥಳೀಯ ಸಮಸ್ಯೆಗಳಿಗೆ ತಮ್ಮ ಹಂತದಲ್ಲಿಯೇ ಪರಿಹಾರ ನೀಡುತ್ತಿದ್ದಾರೆ ಎಂದ ಅವರು, ಈ ಸಭೆಗಳ ಬಗ್ಗೆ ಅತೀ ಹೆಚ್ಚಿನ ಪ್ರಚಾರ ಕೈಗೊಂಡು ಅತೀ ದುರ್ಬಲರು, ವಯಸ್ಸಾದವರು, ಕಡುಬಡವರು, ಕಾರ್ಮಿಕರು, ಮಹಿಳೆಯರಿಗೆ ಸಭೆಯ ಸದುಪಯೊಗ ಪಡೆಯುವಂತೆ ಮಾಡುವ ಮೂಲಕ ಹೊಸ ಸಂಸ್ಕೃತಿಯನ್ನು ನಮ್ಮ ಸರ್ಕಾರ ಸೃಷ್ಠಿಸಿದೆ ಎಂದರು.
ಕರಾವಳಿ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎನ್ನುವುದಕ್ಕೆ ನಿನ್ನೆ (ಶುಕ್ರವಾರ) ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಒಂದು ಉತ್ತಮ ನಿದರ್ಶನವಾಗಿದೆ. 80 ವರ್ಷದಲ್ಲಿಯೇ ಮೊದಲ ಬಾರಿಗೆ ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವುದರೊಂದಿಗೆ ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಹಾಗೂ ಈ ಭಾಗದ ಅಭಿವೃದ್ಧಿಗೆ ನೀಡಬೇಕಾದ ಯೋಜನೆಗಳ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿದೆ ಚರ್ಚಿಸಲಾಗಿದೆ ಎಂದರು.
ಕಸ್ತೂರಿ ರಂಗನ್ ವರದಿಯ ಹೊಸ ಕರಡು ಅಧಿಸೂಚನೆಯಿಂದ ಜನರು ಆತಂಕಕ್ಕೆ ಒಳಗಾದ ಹಿನ್ನೆಲೆ, ಇವರ ಸಮಸ್ಯೆಯನ್ನು ಆಲಿಸಲು ಮಾನ್ಯ ಮುಖ್ಯಂತ್ರಿಗಳೇ ಸ್ವತಃ ನಿನ್ನೆ ಹೆಬ್ರಿಗೆ ಬಂದು ಗ್ರಾಮಗಳ ಜನರ ಅಹವಾಲುಗಳನ್ನು ಆಲಿಸಿದ್ದಾರೆ. ಇದಕ್ಕೆ ಉತ್ತಮ ಪರಿಹಾರವನ್ನು ಕಂಡುಕೊಳ್ಳಲು ನಾವು ಬದ್ಧರಾಗಿರುತ್ತೇವೆ ಎಂದರು.
ಕರಾವಳಿ ಭಾಗಕ್ಕೆ ಪ್ರವಾಸೋದ್ಯಮವೇ ದೊಡ್ಡ ಶಕ್ತಿ. ಪ್ರವಾಸೋದ್ಯಮ ಅಭಿವೃದ್ಧಿಯಿಂದ ಸ್ಥಳೀಯ ಯುವಕರು ದೇಶ-ವಿದೇಶಗಳಿಗೆ ಉದ್ಯೋಗಕ್ಕೆ ತೆರಳುವುದು ತಪ್ಪಲಿದೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆಯನ್ನು ಬೆಳೆಸಿ, ಎಲ್ಲ ಜಾತಿ-ಧರ್ಮದವರು ಸಾಮರಸ್ಯದಿಂದ ಬಾಳುವ ವಾತಾವರಣ ಸೃಷ್ಠಿ ಮಾಡುವ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಾಗ ಪ್ರಪಂಚಕ್ಕೆ ಕರಾವಳಿ ಪ್ರದೇಶವನ್ನು ಸ್ವರ್ಗದ ಮಾದರಿಯಲ್ಲಿ ಸೃಷ್ಠಿಮಾಡಬಹುದಾಗಿದೆ ಎಂದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸಾರ್ವಜನಿಕರ ಹಿತರಕ್ಷಣೆ ಕಾಪಾಡಲು ಸರಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಅದನ್ನು ಯಶಸ್ವಿಯಾಗಿ ಮುಂದುವರೆಸಿಕೊAಡು ಹೋಗಬೇಕು. ಸರಕಾರ ಮತ್ತು ಸಮಾಜದ ನಡುವೆ ಕೊಂಡಿಯಾಗಿ ಜನಪ್ರತಿನಿದಿಗಳು ಹಾಗೂ ಅಧಿಕಾರಿಗಳು ವ್ಯವಸ್ಥಿತ ರೀತಿಯಲ್ಲಿ ಕೆಲಸ ಮಾಡಬೇಕು ಎಂದ ಅವರು, ಪ್ರಜಾಸೇವಾ ಆಂದೋಲನ ಸಭೆಗಳು ಆಂದೋಲನ ರೀತಿಯಲ್ಲಿ ನಡೆದ್ದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸಭೆಯಲ್ಲಿ ನಡೆದ ವಿಷಯಗಳು ಬಗ್ಗೆ ಅನುಪಾಲನ ವರದಿಯ ಆಧಾರದ ಮೇಲೆ ಕ್ರಮವಹಿಸಲು ಮುಂದಾಗಬೇಕು ಎಂದರು.
ದೇವರು ಪ್ರತಿಯೊಬ್ಬರಿಗೂ ಒಂದು ಅವಕಾಶ ನೀಡಿರುತ್ತಾನೆ. ಅದೆ ರೀತಿ ನಮ್ಮಗಳಿಗೂ ಸಹ ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾನೆ. ಅದನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕು. ಪ್ರಜಾಸೇವೆ ಆಂದೋಲನ ಸಭೆಗಳಲ್ಲಿ ಬರಿ ಅರ್ಜಿಗಳನ್ನು ಪಡೆದು ಹಿಂಬರಹ ಕೊಡುವುದು ಮಾತ್ರವಲ್ಲ. ಅದಕ್ಕೆ 21 ದಿನಗಳ ಒಳಗಾಗಿ ಅಧಿಕಾರಿಗಳು ಪರಿಹಾರ ನೀಡಬೇಕು. ಒಂದೊಮ್ಮೆ ಪರಿಹಾರ ಆ ಹಂತದಲ್ಲಿ ಪರಿಹಾರ ಸಿಗದ ಸಮಸ್ಯೆಗಳಿಗೆ ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಲಾಗುವುದು ಎಂದರು.
“ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ* ಪ್ರಾಸ್ತವಿಕವಾಗಿ ಮಾತನಾಡಿ, ವಿಧಾನಸಭೆಯ ಸುತ್ತಮುತ್ತ ಮಾತ್ರವಲ್ಲದೆ ರಾಜ್ಯದ ಪ್ರತಿಯೊಂದು ಹಳ್ಳಿಯ ಕಟ್ಟಕಡೆಯ ವ್ಯಕ್ತಿಗಳ ಸಮಸ್ಯೆಯನ್ನು ಆಲಿಸಿ, ಪರಿಹಾರ ಕಲ್ಪಿಸುವುದರೊಂದಿಗೆ ಅವರಿಗಳ ಮನೆ ಬಾಗಿಲಿಗೆ ಸರಕಾರದ ಯೋಜನೆಗಳನ್ನು ತಲುಪಿಸುವ ಉದ್ದೇಶದದಿಂದ ರಾಜ್ಯ ಸರಕಾರವು ದೂರದೃಷ್ಟಿ ಯೊಂದಿಗೆ ಪ್ರಜಾಸೇವಾ ಆಂದೋಲನ ಸಭೆಗಳನ್ನು ಜಾರಿಗೊಳಿಸಿದೆ.
ಸರಕಾರದ ಸೌಲಭ್ಯಗಳು ಕಚೇರಿಯ ಅಂಚಿನಲ್ಲಿ ನಿಲ್ಲದೆ, ಅವುಗಳು ಅರ್ಹ ಫಲನುಭವಿಗಳಿಗೆ ತಲುಪಿಸಲು, ಪ್ರಜಾಸೇವೆ ಆಂದೋಲನ ಸಭೆಗಳನ್ನು ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಆಯೋಜಿಸಿ, ಕೌಂಟರ್ ಗಳನ್ನು ಸ್ಥಾಪಿಸಿ, ಅವರುಗಳ ಅಹವಾಲು ಸ್ವೀಕರಿಸುವುದರೊಂದಿಗೆ ಅವರುಗಳು ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ ಎಂದರು.
ಪ್ರತಿಯೊಂದು ತಿಂಗಳ ಒಂದು ಹಾಗೂ ಮುರನೆಯ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಎರಡು ಮತ್ತು ನಾಲ್ಕನೇಯ ಶನಿವಾರದಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದ್ದು, ಪ್ರತಿ ಬುಧವಾರ ಜಿಲ್ಲಾಧಿಕಾರಿಗಳ ಹಂತದಲ್ಲಿ ಇತರೆ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಗುಣತ್ಮಕ ಪರಿಹಾರ ನೀಡಲಾಗಿದೆಯೇ ಎಂದು ಪರಿಶೀಲನೆ ನಡೆಸಲಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಕೃಷಿ ಮೇಳ -2026 ರ ಕುರಿತ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬ್ಯಾಟರಿ ಚಾಲಿತ ವ್ಹೀಲ್ ಚೇರ್, ಹೊಲಿಗೆ ಯಂತ್ರ, ಟಾಕಿಂಗ್ ಲ್ಯಾಪ್‌ಟಾಪ್ ಮತ್ತು ಡಿ.ದೇವರಾಜ ಅರಸು ನಿಗಮದ ವತಿಯಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.
ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂದೂರಿ ದಾಸರಿ, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಕಾಪು ನಗರ ಪ್ರಾಧಿಕಾರದ ಅಧ್ಯಕ್ಷ ವಿಕ್ರಮ್ ಕಾಪು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾಪು ತಹಶೀಲ್ದಾರ್ ಅನಂತ ಶಂಕರ್ ಬಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ನಿರೂಪಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 75 ಅರ್ಜಿಗಳು ಸಲ್ಲಿಕೆಯಾಗಿದ್ದವು.
ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆ, ವಿ.ಬಿ ಜಿ ರಾಮ್ ಜಿ ಯೋಜನೆಯ ಬಗ್ಗೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳು ಮಳಿಗೆಗಳನ್ನು ತೆರೆದು ಇಲಾಖಾ ವತಿಯಿಂದ ನೀಡಲಾಗುವ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡಿದರು.
