ಸಮಗ್ರ ಸುದ್ದಿ

ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ- ಸಚಿವ ಬೈರತಿ ಸುರೇಶ್

Share

ಬೆಂಗಳೂರು: ಕೇಂದ್ರ ಸರ್ಕಾರ ನಾಲ್ಕು ಬಾರಿ ಡೀಸೆಲ್ ಮತ್ತು ಇತರೆ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದರಿಂದಾಗಿ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕಳವಳ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಗುರುವಾರ ಬರ ಪರಿಸ್ಥಿತಿ ಬಗ್ಗೆ ನಡೆದ ಚರ್ಚೆಯ ವೇಳೆ ಹೇಳಿಕೆ ನೀಡಿದ ಅವರು, ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ಕೆಎಸ್ಸಾರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದರು.

ಇದರ ಪರಿಣಾಮ ನಾಲ್ಕೂ ನಿಗಮಗಳ ಸಿಬ್ಬಂದಿಗೆ ಸಂಬಳ ಕೊಡಲು ಹಣವಿಲ್ಲದಂತಹ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ನಾಲ್ಕು ನಿಗಮಗಳ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡೋಣವೆಂದರೆ ವಿರೋಧ ಪಕ್ಷಗಳ ಭಯ ಕಾಡುತ್ತಿದೆ ಎಂದು ಮಾರ್ಮಿಕವಾಗಿ ನುಡಿದರು.

ಒಂದು ವೇಳೆ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿದರೆ ಮೊದಲು ವಿರೋಧ ಬರುವುದು ವಿರೋಧ ಪಕ್ಷಗಳಿಂದಲೇ. ಆದಾಗ್ಯೂ, ಸಂಸ್ಥೆಗಳ ಉಳಿವು ಮತ್ತು ಪ್ರಯಾಣಿಕರಿಗೆ ಇನ್ನಷ್ಟು ಸೇವೆ ಕಲ್ಪಿಸುವ ದೃಷ್ಟಿಯಿಂದ ಪ್ರಯಾಣ ದರಗಳನ್ನು ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಮುಖ್ಯಮಂತ್ರಿಗಳ ಮನವೊಲಿಕೆ ಮಾಡುತ್ತಿದ್ದೇವೆ ಎಂದು ಸಾರಿಗೆ ಸಚಿವರು ತಿಳಿಸಿದರು.


Share

You cannot copy content of this page