ಬೆಂಗಳೂರು:ದಿಣ್ಣೂರು ಮುಖ್ಯ ರಸ್ತೆ ಕಿರಿದಾಗಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ದಿಣ್ಣೂರು ಮುಖ್ಯ ರಸ್ತೆಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿನಿಂದ ದೇವೇಗೌಡ ವೃತ್ತದವರೆಗಿನ ರಸ್ತೆ ಪರಿಶೀಲನೆ ವೇಳೆ ಕೆಲವು ಕಡೆ 9–10 ಮೀಟರ್ ಹಾಗೂ ಇನ್ನು ಕೆಲವು ಕಡೆ 6–7 ಮೀಟರ್ ಅಗಲವಿರುವುದು ಕಂಡುಬಂದಿದೆ. ಈ ರಸ್ತೆಯಲ್ಲಿ ಹೆಚ್ಚಿನ ವಾಹನ ದಟ್ಟಣೆ ಇದ್ದು, ಕೆಲವು ಕಡೆ ರಸ್ತೆಯಲ್ಲೇ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡದಂತೆ ಕ್ರಮ ಕೈಗೊಂಡು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ದಿಣ್ಣೂರು ಮುಖ್ಯ ರಸ್ತೆಯ ಕಿರಿದಾದ ಬಾಟಲ್ ನೆಕ್ ಸ್ಥಳಗಳಲ್ಲಿ ಅಗತ್ಯವಿರುವ ಕಟ್ಟಡಗಳನ್ನು ಸ್ವಾಧೀನಪಡಿಸಿಕೊಂಡು ರಸ್ತೆ ಅಗಲೀಕರಣ ಮಾಡಲು ಸಾಧ್ಯವೇ ಎಂಬುದರ ಕುರಿತು ಪರಿಶೀಲಿಸಿ, ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯ ಅಭಿಯಂತರರಿಗೆ ನಿರ್ದೇಶನ ನೀಡಿದರು.
ದೇವೇಗೌಡ ವೃತ್ತದ ಬಳಿ ಫ್ರೀ ಲೆಫ್ಟ್ ಇಲ್ಲದ ಕಾರಣ ಸಂಚಾರ ದಟ್ಟಣೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಅವರು, ಖಾಸಗಿ ಅಪಾರ್ಟ್‌ಮೆಂಟ್‌ನ ಭಾಗದಲ್ಲಿ ಸ್ಥಳಾವಕಾಶವಿದ್ದು, ಎದುರಿನ ಕಟ್ಟಡದ ಸ್ಥಳವನ್ನೂ ಪರಿಗಣಿಸಿ ವೃತ್ತದಲ್ಲಿ ಫ್ರೀ ಲೆಫ್ಟ್ ನಿರ್ಮಿಸುವ ಸಲುವಾಗಿ ಸೂಕ್ತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಟ್ಯಾನರಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದ್ದು, ಕಿರಿದಾದ ರಸ್ತೆಯಿರುವ ಸ್ಥಳದಲ್ಲಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಪಾಲಿಕೆಯ ಜಾಗವಿದೆ. ಈ ಸ್ಥಳದಲ್ಲಿ ರಸ್ತೆಯನ್ನು ಅಗಲೀಕರಣ ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ, ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಲ್ವರ್ಟ್ ಕಾಮಗಾರಿ ಬೇಗ ಪೂರ್ಣಗೊಳಿಸಿ:
ಅಮೃತಹಳ್ಳಿ 18ನೇ ಕ್ರಾಸ್ ರಸ್ತೆಯಲ್ಲಿ 700 ಮೀಟರ್ ಉದ್ದದ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡಿದೆ. ಬೆಸ್ಕಾಂ ಯುಟಿಲಿಟಿ ಶಿಫ್ಟ್, ಬಫರ್ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ.
ಇದೇ ಸ್ಥಳದಲ್ಲಿ ಯೋಜನಾ ಅನುಷ್ಠಾನ ಕೋಶದಿಂದ ರಾಜಕಾಲುವೆ ಕಲ್ವರ್ಟ್ ಕಾಮಗಾರಿ ಪ್ರಗತಿಯಲ್ಲಿದ್ದು, ಕಲ್ವರ್ಟ್ ಅನ್ನು ರಸ್ತೆ ಮಟ್ಟಕ್ಕಿಂತ ಎತ್ತರವಾಗಿ ನಿರ್ಮಿಸಿರುವುದನ್ನು ಗಮನಿಸಿದ ಮುಖ್ಯ ಆಯುಕ್ತರು, ಕಲ್ವರ್ಟ್ ಅನ್ನು ರಸ್ತೆ ಮಟ್ಟಕ್ಕೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜಕಾಲುವೆಯಲ್ಲಿ ಕೊಳಚೆ ನೀರು ಹರಿಯುತ್ತಿರುವುದನ್ನು ಗಮನಿಸಿದ ಅವರು, ಜಲಮಂಡಳಿ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಕಾಲುವೆಗೆ ಎಲ್ಲಿಂದ ಕೊಳಚೆ ನೀರು ಬರುತ್ತಿದೆ ಎಂಬುದನ್ನು ಪರಿಶೀಲಿಸುವಂತೆ ಸೂಚಿಸಿದರು. ಜೊತೆಗೆ, ಕೊಳಚೆ ನೀರನ್ನು ಮೂಲದಲ್ಲಿಯೇ ತಡೆಗಟ್ಟಿ ಕಾಲುವೆಗೆ ಹರಿದುಬರದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
“ಫ್ರೀ ಲೆಫ್ಟ್ ನಿರ್ಮಿಸಿ:*
ಜಕ್ಕೂರು ಬಳಿಯ ಕೆ.ವಿ. ಜಯರಾಮ್ ರಸ್ತೆಯಲ್ಲಿ 2.1 ಕಿ.ಮೀ. ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈ ಪೈಕಿ 250 ಮೀಟರ್ ಕಾಮಗಾರಿ ಪೂರ್ಣಗೊಂಡಿದೆ.
ಕೃಷ್ಣ ಸಾಗರ್ ಹೋಟೆಲ್ ಬಳಿ ಫ್ರೀ ಲೆಫ್ಟ್ ನಿರ್ಮಿಸಿದರೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರಿಶೀಲನೆಯ ವೇಳೆ ಮುಖ್ಯ ಅಭಿಯಂತರರಾದ ಡಾ. ರಾಘವೇಂದ್ರ ಪ್ರಸಾದ್, ಸಂಜೀವ್ ರಾಜ್, ಮಹದೇಶ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
