ಮೈಸೂರು:ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ‘ಮಹಿಳಾ ದಸರಾ’ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು.
ನಗರದ ಜೆ.ಕೆ. ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಅತ್ಯಂತ ಸಂಭ್ರಮದಿಂದ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಮ್ಮ ಸಮಾಜ ಮತ್ತು ಕುಟುಂಬದ ಪ್ರತಿ ಹಂತದಲ್ಲೂ ಮಹಿಳೆಯರ ಪಾತ್ರವೇ ಅತ್ಯಂತ ಪ್ರಮುಖವಾದುದು. ಒಂದೆಡೆ ಸ್ತ್ರೀಯರನ್ನು ದೇವತೆಯಂತೆ ಪೂಜಿಸುತ್ತಲೇ, ಮತ್ತೊಂದೆಡೆ ಅವರ ಮೇಲೆ ಕಟ್ಟುಪಾಡುಗಳನ್ನು ಹಾಕಿ ಬಿಗಿಯುವ ಸಂಪ್ರದಾಯವನ್ನು ನಾವು ಸಂಪೂರ್ಣವಾಗಿ ಹೋಗಲಾಡಿಸಬೇಕಿದೆ ಎಂದು ತಿಳಿಸಿದರು.
ಭಗವಾನ್ ಬುದ್ಧ, ಜಗಜ್ಯೋತಿ ಬಸವಣ್ಣ ಹಾಗೂ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ಬೋಧಿಸಿದ ಸಮಾನತೆಯ ಆಶಯದಂತೆ, ಲಿಂಗತಾರತಮ್ಯವನ್ನು ತೊರೆದು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಇಂದು ಮಹಿಳೆಯರು ಶಿಕ್ಷಣ, ಕ್ರೀಡೆ, ಸಮಾಜಸೇವೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಅಪಾರ ಸಾಧನೆ ಮಾಡುತ್ತಿದ್ದಾರೆ. ಅಂತಹ ಸಾಧಕಿಯರ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ರೂಪಿಸಲಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಈ ಶ್ಲಾಘನೀಯ ಪ್ರಯತ್ನಕ್ಕೆ ಸಚಿವರು ಅಭಿನಂದನೆ ಸಲ್ಲಿಸಿದರು.
ಇದೇ ವೇಳೆ ಸ್ವಾವಲಂಬಿಯಾಗಿ ಮಹಿಳೆಯರು ನಿರ್ಮಿಸಿರುವ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಸಚಿವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಪುಟ್ಟರಂಗಶೆಟ್ಟಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಿ. ಪದ್ಮಾವತಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ರಂಗಸ್ವಾಮಿ, ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ (MPVL) ಸಂಸ್ಥೆಯ ಅಧ್ಯಕ್ಷರಾದ ಹೆಚ್.ಡಿ. ಗಣೇಶ್, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚೂಡಾಮಣಿ, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಡಾ. ಬಿ.ಜೆ. ವಿಜಯ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅರುಣ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರಾಕೇಶ್ ಪಾಪಣ್ಣ, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಕಾರ್ಯದರ್ಶಿಗಳಾದ ನಾಗರಾಜ್ ಆರ್ , ವಿಶೇಷ ಕರ್ತವ್ಯಾಧಿಕಾರಿ ಹಾಗೂ ಉಪಕಾರ್ಯದರ್ಶಿಗಳಾದ ಬಿ. ಎಂ ಸವಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
