ಬೆಂಗಳೂರು:ಕುಮಾರಿ ಶುಭಾ ಶಂಕರ್ ಮತ್ತು ಡಿ. ಅರುಣ್ ವರ್ಮಾ ಅವರು ಸಲ್ಲಿಸಿರುವ ಕ್ಷಮಾದಾನ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಕರ್ನಾಟಕ ಸಚಿವ ಸಂಪುಟ ಇಂದು ತೀರ್ಮಾನಿಸಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನ 17ನೇ ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ ದಾಖಲಾಗಿದ್ದ ಎಸ್.ಸಿ. ಸಂಖ್ಯೆ 314/2004ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ 2025ರ ಜುಲೈ 14ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರಿಗೆ ಭಾರತದ ಸಂವಿಧಾನದ 161ನೇ ವಿಧಿಯಡಿ ರಾಜ್ಯಪಾಲರ ಮುಂದೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಲು ಎಂಟು ವಾರಗಳ ಕಾಲಾವಕಾಶ ನೀಡಿತ್ತು. ಅರ್ಜಿಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳುವವರೆಗೆ ಅವರನ್ನು ಬಂಧಿಸಬಾರದು ಹಾಗೂ ಶಿಕ್ಷೆಯನ್ನು ಅಮಾನತಿನಲ್ಲಿಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿತ್ತು.
ಈ ಹಿನ್ನೆಲೆಯಲ್ಲಿ, ಕ್ಷಮಾದಾನ ಮನವಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
