ಬೆಳಗಾವಿ : ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲು ಅನುಮತಿ ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ 5000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಸಹ ಒದಗಿಸಲಾಗಿದೆ ಎಂದರು.
