ಬೆಂಗಳೂರು:ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಎರಡನೇ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಜಿಲ್ಲಾ ಪ್ರಾತಿನಿಧ್ಯ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುವ ಜೊತೆಗೆ ಅರ್ಹತೆಯನ್ನೇ ಮುಖ್ಯಮಾನದಂಡವಾಗಿ ಪರಿಗಣಿಸಲು ಚರ್ಚಿಸಲಾಯಿತು. ಪ್ರಶಸ್ತಿಗೆ ಅರ್ಹರಾದವರ ಆಯ್ಕೆ ಕುರಿತಂತೆ ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮಂಡಿಸಿದರು.
ನಾಳೆ ಸಂಜೆ ಮುಖ್ಯಮಂತ್ರಿಗಳ ಜೊತೆ ಆಯ್ಕೆ ಸಲಹಾ ಸಮಿತಿ ಸಭೆ
ಮುಂದಿನ ಹಂತದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಆಯ್ಕೆ ಸಲಹಾ ಸಮಿತಿಯ ಸಭೆ ನಡೆಯಲಿದ್ದು, ಬಳಿಕ ಉನ್ನತಮಟ್ಟದ ಸಮಿತಿ ಸಭೆ ನಡೆಸಿ ಪ್ರಶಸ್ತಿ ಪುರಸ್ಕೃತರ ಅಂತಿಮ ಆಯ್ಕೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯ ಗೌಪ್ಯತೆಯನ್ನು ಕಾಪಾಡುವಂತೆ ಸಮಿತಿ ಸದಸ್ಯರಿಗೆ ಸಚಿವರು ಕಿವಿಮಾತು ಹೇಳಿದರು. ಅಂತಿಮ ಸಭೆ ನಡೆದು ತೀರ್ಮಾನ ಕೈಗೊಳ್ಳುವವರೆಗೆ ಸಭೆಯಲ್ಲಿ ನಡೆದ ಚರ್ಚೆಗಳು ಹಾಗೂ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಸೂಚಿಸಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸಮಿತಿ ಸದಸ್ಯರು ತಾವು ಶಿಫಾರಸು ಮಾಡಿದ ಅಭ್ಯರ್ಥಿಗಳ ಅರ್ಹತೆ, ಸಾಧನೆ ಹಾಗೂ ಪ್ರಶಸ್ತಿಗೆ ಅವರು ಏಕೆ ಅರ್ಹರು ಎಂಬುದನ್ನು ಸಮರ್ಥವಾಗಿ ವಿವರಿಸಬೇಕು. ಈ ಹಂತದಲ್ಲಿಯೂ ಸದಸ್ಯರು ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಮಂಡಿಸಬಹುದಾಗಿದೆ ಎಂದು ತಂಗಡಗಿ ತಿಳಿಸಿದರು.
ಸಭೆಯಲ್ಲಿ ಮಾಜಿ ಸಚಿವೆ ಜಯಮಾಲಾ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ್ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಶ್ರೀ, ನಿರ್ದೇಶಕ ಎಸ್.ನಾರಾಯಣ್, ಸಂಗೀತ ನಿರ್ದೇಶಕ ಸಾಧುಕೋಕಿಲಾ, ಇಲಾಖೆ ನಿರ್ದೇಶಕಿ ವಸುಂಧರಾ, ಅಕಾಡೆಮಿ ಅಧ್ಯಕ್ಷರು ಹಾಗೂ ಆಯ್ಕೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
