ಸಮಗ್ರ ಸುದ್ದಿ

ಎಲ್ಲ ತಾಲ್ಲೂಕು ಹಾಗೂ ಪ್ರಮುಖ ಹೋಬಳಿ ಮಟ್ಟದಲ್ಲಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಯೋಜನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

Share

ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಅಗತ್ಯ ಸೌಲಭ್ಯ, ಆರ್ಥಿಕ ನೆರವು ಮತ್ತು ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ 2ನೇ ಅಖಿಲ ಭಾರತ ಅಗ್ನಿಶಾಮಕ ಸೇವೆಗಳ ಕ್ರೀಡಾಕೂಟ–2026ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ಜನರ ಜೀವ ಹಾಗೂ ಆಸ್ತಿಪಾಸ್ತಿಗಳ ರಕ್ಷಣೆಗಾಗಿ ಶ್ರಮಿಸುತ್ತಿದ್ದಾರೆ. ಅಪಾಯಕಾರಿ ಸಂದರ್ಭಗಳಲ್ಲಿ ಧೈರ್ಯ, ದೈಹಿಕ ಸಾಮರ್ಥ್ಯ, ಸಮಯಪ್ರಜ್ಞೆ ಮತ್ತು ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವ ಈ ಸಿಬ್ಬಂದಿಯ ಸೇವೆ ಮಹತ್ವದ್ದಾಗಿದೆ ಎಂದು ಸಚಿವರು ಹೇಳಿದರು.

ಎಲ್ಲ ತಾಲ್ಲೂಕುಗಳಿಗೂ ಅಗ್ನಿಶಾಮಕ ಸೇವೆ ವಿಸ್ತರಣೆ
ದೇಶದ ಪ್ರತಿಯೊಂದು ತಾಲ್ಲೂಕಿನಲ್ಲೂ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಆಶಯದಂತೆ, ಕರ್ನಾಟಕದಲ್ಲಿಯೂ ಎಲ್ಲ ತಾಲ್ಲೂಕುಗಳು ಹಾಗೂ ಪ್ರಮುಖ ಹೋಬಳಿ ಮಟ್ಟದಲ್ಲಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಇದರಿಂದ ಅಗ್ನಿ ಅವಘಡಗಳು ಮತ್ತು ಇತರ ತುರ್ತು ಸಂದರ್ಭಗಳಲ್ಲಿ ಜನರಿಗೆ ತ್ವರಿತವಾಗಿ ನೆರವು ಒದಗಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಇಲಾಖೆಗೆ ಅಗತ್ಯವಿರುವ ಸೌಲಭ್ಯಗಳು, ಮೂಲಸೌಕರ್ಯ ಹಾಗೂ ಆರ್ಥಿಕ ನೆರವು ಒದಗಿಸುವ ಮೂಲಕ ಅದರ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಭರವಸೆ ನೀಡಿದರು.

ಗೆಲುವಿಗಿಂತ ಕ್ರೀಡಾಸ್ಫೂರ್ತಿ ಮುಖ್ಯ
ಕ್ರೀಡೆಯಲ್ಲಿ ಗೆಲುವು ಮತ್ತು ಸೋಲು ಸಹಜ. ಆದರೆ ಪ್ರಾಮಾಣಿಕತೆ, ಸಮರ್ಪಣೆ ಮತ್ತು ನ್ಯಾಯಯುತ ಆಟದ ಮೂಲಕ ಗಳಿಸುವ ಗೌರವವೇ ಅತ್ಯಂತ ಮೌಲ್ಯಯುತವಾದುದು. ಪದಕ ಮತ್ತು ಪ್ರಶಸ್ತಿಗಳನ್ನು ಗೆಲ್ಲಲು ಪ್ರಯತ್ನಿಸುವುದರ ಜತೆಗೆ ಉತ್ತಮ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸುವುದು ಮುಖ್ಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕ್ರೀಡೆಯು ಇತರರೊಂದಿಗೆ ಸ್ಪರ್ಧಿಸುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ನಮ್ಮದೇ ಸಾಮರ್ಥ್ಯವನ್ನು ಹಿಂದಿನ ದಿನಕ್ಕಿಂತ ಉತ್ತಮಗೊಳಿಸಿಕೊಳ್ಳುವ ಪ್ರಯತ್ನವೂ ಕ್ರೀಡೆಯ ಪ್ರಮುಖ ಪಾಠವಾಗಿದೆ. ಎಲ್ಲ ಕ್ರೀಡಾಪಟುಗಳು ಶಿಸ್ತು ಪಾಲಿಸಿ, ಸಹ ಸ್ಪರ್ಧಿಗಳನ್ನು ಗೌರವಿಸಿ, ಉತ್ಸಾಹದಿಂದ ಸ್ಪರ್ಧಿಸುವ ಮೂಲಕ ಕ್ರೀಡಾಕೂಟದ ಉದ್ದೇಶವನ್ನು ಸಾರ್ಥಕಗೊಳಿಸಬೇಕು ಎಂದು ಕರೆ ನೀಡಿದರು.

ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಸಚಿವರು, ಈ ಕ್ರೀಡಾಕೂಟವು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯ ನಡುವೆ ಸ್ನೇಹ, ಸಹಕಾರ, ಏಕತೆ ಮತ್ತು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಮತ್ತಷ್ಟು ಬಲಪಡಿಸಲಿ ಎಂದು ಆಶಿಸಿದರು.
ಕ್ರೀಡಾಕೂಟವನ್ನು ಆಯೋಜಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಮಹಾನಿರ್ದೇಶಕರು, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಭಿನಂದಿಸಿದರು.

ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಗೃಹರಕ್ಷಕ ದಳ, ನಾಗರಿಕ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ. ನಂಜುಂಡಸ್ವಾಮಿ, ಉಪ ಮಹಾನಿರ್ದೇಶಕಿ ರೇಣುಕಾ ಕೆ. ಸುಕುಮಾರ್, ಅಗ್ನಿಶಾಮಕ ಸಲಹೆಗಾರ ಪ್ರಶಾಂತ್ ಲೋಂಕರ್, ಉಪ ಅಗ್ನಿಶಾಮಕ ಸಲಹೆಗಾರ ಮೋರೆಶ್ವರ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಉಪಸ್ಥಿತರಿದ್ದರು.


Share

You cannot copy content of this page