ಸಮಗ್ರ ಸುದ್ದಿ

ಯಲ್ಲಾಪುರ ಪಟ್ಟಣಕ್ಕೆ ಬಜೆಟ್‍ನಲ್ಲಿ ಹೊಸ ಎಸ್‍ಟಿ ಹಾಸ್ಟೆಲ್ ಘೋಷಣೆ: ಸಿಎಂ ಸಿದ್ದರಾಮಯ್ಯ

Share

ಬೆಳಗಾವಿ: ಮುಂಬರುವ ಬಜೆಟ್‍ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿಧಾನಪರಿಷತ್ತಿನಲ್ಲಿಂದು ಸದಸ್ಯರಾದ ಶಾಂತಾರಾಮ ಬುಡ್ನಸಿದ್ಧಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ಯಾವುದೇ ಒಂದು ಸ್ಥಳದಲ್ಲಿ ಪ್ರಾರಂಭಿಸಲು ಸುತ್ತಮುತ್ತಲಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಅವರಿಂದ ವಸತಿ ನಿಲಯ ಪ್ರವೇಶಾತಿಗೆ ಬೇಡಿಕೆಯು ಪ್ರಮುಖ ಮಾನದಂಡ ಗಳಾಗಿರುತ್ತವೆ ಎಂದು ತಿಳಿಸಿದರು.

ಜಿಲ್ಲೆಗಳಿಂದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ನಿಲಯಗಳ ಮಂಜೂರಾತಿ ಕುರಿತು ಸೂಕ್ತ ಪ್ರಸ್ತಾವನೆ ಸ್ವೀಕೃತವಾದಲ್ಲಿ ಮತ್ತು ಅತ್ಯಾವಶ್ಯಕ ಎಂದು ಕಂಡುಬಂದಲ್ಲಿ, ಆದ್ಯತೆಯ ಮೇರೆಗೆ ಪರಿಶೀಲಿಸಿ, ಅನುದಾನದ ಲಭ್ಯತೆಗೆ ಅನುಸಾರ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲು ಪರಿಶೀಲಿಸಲಾಗುವುದು.

2024-25 ಮತ್ತು 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅತ್ಯಾವಶ್ಯಕವಾಗಿ ಬೇಕಾಗಿರುವ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಒಟ್ಟು 34 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗಿದ್ದು, ಈ ಪೈಕಿ ಉತ್ತರಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ 02 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.


Share

You cannot copy content of this page