ಬೆಂಗಳೂರು:ಶಿಕ್ಷಣವೆಂಬುದು ಕೇವಲ ಒಂದು ಮಗುವಿನ ಭವಿಷ್ಯವನ್ನು ರೂಪಿಸುವ ಸಾಧನವಲ್ಲ; ಅದು ಇಡೀ ಸಮಾಜ ಮತ್ತು ದೇಶದ ಭವಿಷ್ಯವನ್ನು ನಿರ್ಧರಿಸುವ ಶಕ್ತಿಯಾಗಿದೆ. ಪ್ರತಿಯೊಂದು ಮಗುವಿಗೂ ಸಮಾನ ಅವಕಾಶ, ಗುಣಮಟ್ಟದ ಶಿಕ್ಷಣ ಹಾಗೂ ಉಜ್ವಲ ಭವಿಷ್ಯ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಪಾಲುದಾರರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಕೈಜೋಡಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು.
ಬುಧವಾರ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (Institutional CSR) ಪ್ರತಿನಿಧಿಗಳ ಸಭೆಯಲ್ಲಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸರ್ಕಾರದೊಂದಿಗೆ ಖಾಸಗಿ ಸಂಸ್ಥೆಗಳು ಮತ್ತು ಕಾರ್ಪೊರೇಟ್ ವಲಯವೂ ಕೈಜೋಡಿಸುವುದು ಅಗತ್ಯ ಎಂದರು.
ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳು ಸೇರಿದಂತೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮೂಲಕ ಒಟ್ಟು 1.12 ಕೋಟಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಪ್ರತಿಯೊಂದು ಮಗುವಿಗೂ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದರ ಜೊತೆಗೆ ಶಿಕ್ಷಣದಲ್ಲಿ ಸಮಾನತೆಯನ್ನು ಸ್ಥಾಪಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಕಳೆದ ಮೂರೂವರೆ ವರ್ಷಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯು ಹಲವು ಐತಿಹಾಸಿಕ ಹಾಗೂ ಮಹತ್ವದ ಶೈಕ್ಷಣಿಕ ಸುಧಾರಣೆಗಳನ್ನು ಜಾರಿಗೊಳಿಸಿದೆ. ಇವು ಕೇವಲ ಆಡಳಿತಾತ್ಮಕ ಬದಲಾವಣೆಗಳಲ್ಲ; ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ ಮತ್ತು ಭವಿಷ್ಯದ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಕೈಗೊಂಡ ಕ್ರಮಗಳಾಗಿವೆ ಎಂದು ಸಚಿವರು ವಿವರಿಸಿದರು.
ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಆಶಯಗಳು, ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ. ವೈಜ್ಞಾನಿಕ ದೃಷ್ಟಿಕೋನ, ಸತ್ಯಾಧಾರಿತ ಮಾಹಿತಿ ಹಾಗೂ ಸಮಾಜದ ಎಲ್ಲ ವರ್ಗಗಳನ್ನೂ ಒಳಗೊಳ್ಳುವ ಶಿಕ್ಷಣ ಒದಗಿಸುವ ಉದ್ದೇಶದಿಂದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿದೆ ಎಂದರು.
ಮಕ್ಕಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡಲು ಶಾಲಾ ಬ್ಯಾಗ್ಗಳ ಹೊರೆಯನ್ನು ಶೇ.50ರಷ್ಟು ತಗ್ಗಿಸುವ ಕ್ರಮ ಕೈಗೊಳ್ಳಲಾಗಿದೆ. ಈ ಉದ್ದೇಶದಿಂದ ಪಠ್ಯಪುಸ್ತಕಗಳನ್ನು ಎರಡು ಭಾಗಗಳಾಗಿ ವಿಂಗಡಿಸಿ, ಮೊದಲ ಮತ್ತು ಎರಡನೇ ಶೈಕ್ಷಣಿಕ ಮೌಲ್ಯಮಾಪನಕ್ಕೆ (SA-1 ಮತ್ತು SA-2) ಅನುಗುಣವಾಗಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
SSLC, ಪಿಯುಸಿ ಫಲಿತಾಂಶದಲ್ಲಿ ಸಾರ್ವಕಾಲಿಕ ದಾಖಲೆ
ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಒತ್ತಡವನ್ನು ಕಡಿಮೆ ಮಾಡಿ, ಕಲಿಕೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ SSLC ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿತ್ತು. 2026-27ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳ ಉತ್ತಮ ಫಲಿತಾಂಶದ ಹಿನ್ನೆಲೆಯಲ್ಲಿ ಈ ವ್ಯವಸ್ಥೆಯನ್ನು ಎರಡು ಪರೀಕ್ಷೆಗಳಿಗೆ ಸೀಮಿತಗೊಳಿಸಲಾಗಿದೆ ಎಂದು ಹೇಳಿದರು.
ಈ ಸುಧಾರಣೆಗಳು ಸೇರಿದಂತೆ ಇಲಾಖೆಯ ವಿವಿಧ ಪ್ರಯತ್ನಗಳ ಫಲವಾಗಿ 2026ರ SSLC ಪರೀಕ್ಷೆಯಲ್ಲಿ ಶೇ.98.08ರಷ್ಟು ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92.25ರಷ್ಟು ತೇರ್ಗಡೆ ಪ್ರಮಾಣ ದಾಖಲಾಗಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದ್ದು, ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಬದ್ಧತೆ ಮತ್ತು ಇಲಾಖೆಯ ಸುಧಾರಣಾ ಕ್ರಮಗಳಿಗೆ ದೊರೆತ ಮಹತ್ವದ ಫಲಿತಾಂಶವಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.
KPS ಶಾಲೆಗಳ ಅಭಿವೃದ್ಧಿಗೆ ಆದ್ಯತೆ
ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ (KPS) ಪರಿಕಲ್ಪನೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಈ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ಒಂದೇ ಸೂರಿನಡಿ ಉಚಿತ ಶಿಕ್ಷಣ ಒದಗಿಸುವ ಉದ್ದೇಶ ಹೊಂದಲಾಗಿದೆ.
KPS ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಬೋಧನೆ, ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ, ಆಧುನಿಕ ಸ್ಮಾರ್ಟ್ ತರಗತಿಗಳು ಹಾಗೂ ಉಚಿತ ಶಾಲಾ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
18 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ
ಶಿಕ್ಷಣ ವ್ಯವಸ್ಥೆಯ ನಿಜವಾದ ಶಕ್ತಿ ಶಿಕ್ಷಕರು. ಸಮರ್ಥ ಶಿಕ್ಷಕರಿಲ್ಲದೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಮುಂದಿನ ಶೈಕ್ಷಣಿಕ ವರ್ಷದೊಳಗೆ 18,000 ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.
ಅಲ್ಲದೆ, ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ 43,553 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದರಿಂದ ಶಿಕ್ಷಕರ ಕೊರತೆಯಿಂದ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದರು.
‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಅಭಿಯಾನಕ್ಕೆ ಕರೆ
ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಸರ್ಕಾರದ ಪ್ರಯತ್ನಗಳೊಂದೇ ಸಾಕಾಗುವುದಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಉದ್ಯಮಗಳು, ಕಾರ್ಪೊರೇಟ್ ಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ CSR ಪಾಲುದಾರರ ಸಹಕಾರವೂ ಅತ್ಯಗತ್ಯವಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಸಂಸ್ಥೆಗಳು ಮತ್ತು CSR ಪಾಲುದಾರರು ಯಾವ ರೀತಿಯಲ್ಲಿ ಸಹಕರಿಸಬಹುದು ಎಂಬುದನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಸರ್ಕಾರವು ಸಮುದಾಯ ಮತ್ತು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಮಾರ್ಗಸೂಚಿಗಳನ್ನು (Community and Corporate Social Responsibility Guidelines) ಹೊರಡಿಸಿದೆ.
‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಎಂಬ ಪರಿಕಲ್ಪನೆಯಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ, ಕಲಿಕಾ ಸೌಲಭ್ಯಗಳು ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಬಲಪಡಿಸುವಲ್ಲಿ CSR ಪಾಲುದಾರರು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಉಪಸಭಾಪತಿಗಳಾದ ಮಂಕಾಳ್ ವೈದ್ಯ, ರಾಜ್ಯಸಭಾ ಸದಸ್ಯರಾದ ಮನ್ಸೂರ್ ಅಲಿ ಖಾನ್, ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರರಾದ ಜಿ.ಸಿ. ಚಂದ್ರಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಶಾಲಾ ಶಿಕ್ಷಣ ಆಯುಕ್ತೆ ಕೆ. ವಿದ್ಯಾಕುಮಾರಿ ಸೇರಿದಂತೆ ಹಿರಿಯ ಅಧಿಕಾರಿಗಳು, ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಣ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.
