ಸಮಗ್ರ ಸುದ್ದಿ

ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂ.:ಸಚಿವ ಸಂಪುಟ ಅನುಮೋದನೆ

Share

ಬೆಂಗಳೂರು: ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು, ಸೇತುವೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ.

ಸಂಪುಟ ಸಭೆಯ ಬಳಿಕ ವಿವರ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದ್ದು, ರಾಜ್ಯದ ವಿವಿಧ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಮ್ಮತಿಸಿದೆ ಎಂದರು.

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ 5, ಘಟ್ಟ 2 ರಲ್ಲಿ, ಒಟ್ಟು 1897 ಕಿ.ಮೀ. ಉದ್ದದ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು ಎಂದ ಅವರು, ಅನುಬಂಧ- ಇ ಅಡಿಯಲ್ಲಿ 6000 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿವಿಧ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಸ್ತೆ, ಸೇತುವೆ ಮತ್ತು ಕಟ್ಟಡ ಕಾಮಗಾರಿ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಜೊತೆಗೆ 3000 ಕೋಟಿ ರೂ ಹೆಚ್ಚುವರಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲೂ ಸಂಪುಟ ಸಮ್ಮತಿಸಿದ್ದು, ಒಂದು ಜಿಲ್ಲಾ ಕೇಂದ್ರದಿಂದ ಮತ್ತೊಂದು ಜಿಲ್ಲಾ ಕೇಂದ್ರಕ್ಕೆ, ಜಿಲ್ಲಾ ಕೇಂದ್ರದಿಂದ ತಾಲ್ಲೂಕು ಕೇಂದ್ರಕ್ಕೆ ಮತ್ತು ತಾಲ್ಲೂಕು ಕೇಂದ್ರದಿಂದ ತಾಲ್ಲೂಕು ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 3986 ಕಿ.ಮೀ. ರಸ್ತೆ ಅಭಿವೃದ್ಧಿಯನ್ನು 6000 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಹೊಸ ಯೋಜನೆಗೂ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದರು.

ಬೆಂಗಳೂರು ಸುತ್ತಮುತ್ತಲ 155 ಕಿ.ಮೀ ರಸ್ತೆಗಳ ಅಭಿವೃದ್ಧಿಗೂ ಒಪ್ಪಿಗೆ:

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು 10 ಪ್ಯಾಕೇಜ್‌ ಗಳಲ್ಲಿ ಕೈಗೊಳ್ಳಲು 3409.02 ಕೋಟಿ ರೂ. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.


ಬೆಂಗಳೂರು ನಗರ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಮತ್ತು ಬೆಂಗಳೂರು ನಗರದ ರಸ್ತೆ ಜಾಲವನ್ನು ಬಲಪಡಿಸಲು ಈ ಯೋಜನೆ ಪೂರಕವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಬೆಂಗಳೂರು ಸುತ್ತಮುತ್ತಲಿನ 155 ಕಿ.ಮೀ. ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಇ.ಪಿ.ಸಿ. ಮಾದರಿಯಲ್ಲಿ 2095 ಕೋಟಿ ರೂ. ಗಳಲ್ಲಿ ಕೈಗೆತ್ತಿಕೊಳ್ಳಲು 2017ರಲ್ಲಿಯೇ ಅನುಮೋದನೆ ನೀಡಲಾಗಿತ್ತು. ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು 2019 ರಲ್ಲಿ ಪ್ರಾರಂಭಿಸಲಾಗಿದ್ದು, ಪರಿಷ್ಕೃತ 142.27 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೈಕಿ 121.78 ಕಿ.ಮೀ. ರಸ್ತೆ ಪೂರ್ಣಗೊಂಡಿದೆ ಎಂದೂ ವಿವರಿಸಿದರು.


Share

You cannot copy content of this page